ಮಡಿಕೇರಿ, ಆ. ೧೦: ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಮತ್ತು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಅವಮಾನಿಸಿದ ಘಟನೆಯನ್ನು ಖಂಡಿಸಿ ಹಾಗೂ ಅತ್ಯಾಚಾರದಿಂದ ಅಮಾನವೀಯವಾಗಿ ಹತ್ಯೆಯಾದ ಉಜಿರೆಯ ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಆಗ್ರಹಿಸಿ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಸಂಘಟನಾ ಸಂಚಾಲಕÀ ಮನೋಜ್ ಕುಮಾರ್, ಬಾವ ಮಾಲ್ದಾರೆ, ಬೋಜ, ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕರಾದ ಶಶಿ ಕಲಾ, ಭಾಗ್ಯವತಿ, ವೀರಾಜ ಪೇಟೆ ತಾಲೂಕು ಸಂಚಾಲಕ ಮನು, ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕಿ ತೀರ್ಥ, ಸದಸ್ಯರಾದ ವೈ.ಕೆ. ಅಯ್ಯಪ್ಪ, ವಿರೇಶ್, ಭರತ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿ ದ್ದರು.
ಬೇಡಿಕೆಯ ಮನವಿ ಪತ್ರವನ್ನು ಪ್ರತಿಭಟನಾಕಾರರು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದರು. ಪ್ರತಿಭಟನೆಗೂ ಮುನ್ನ ತೆಲಂಗಾಣದ ಖ್ಯಾತ ಜಾನಪದ ಕಲಾವಿದ, ಹೋರಾಟಗಾರ ಗುಮ್ಮಡಿ ವಿಠಲ್ ರಾವ್ "ಗದ್ದರ್" ಅವರಿಗೆ ಸಂಘಟನೆ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.