ಮಡಿಕೇರಿ, ಆ. ೧೧: ಪ್ರಧಾನಮಂತ್ರಿ ಅವರ ೧೫ ಅಂಶಗಳ ಕಾರ್ಯಕ್ರಮಗಳ ಅನುಷ್ಠಾನ ಸಂಬAಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಲ್ಪಸಂಖ್ಯಾತರಿಗಾಗಿ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಎಲ್ಲಾ ಇಲಾಖೆಯ ಹಂತದ ಅಧಿಕಾರಿಗಳು ಶ್ರಮಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು.

ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗಾಗಿ ಇರುವ ಕಾರ್ಯಕ್ರಮಗಳಿಗೆ ಸಂಬAಧಿಸಿದAತೆ ಕಿರುಹೊತ್ತಿಗೆ ಮುದ್ರಣ ಮಾಡಿ ಎಲ್ಲೆಡೆ ವಿತರಿಸಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಲಹೆ ಮಾಡಿದರು.

ಪ್ರಸಕ್ತ ಸಾಲಿನಲ್ಲಿ ವಿವಿಧ ಇಲಾಖೆಗಳಿಗೆ ಅಲ್ಪಸಂಖ್ಯಾತರಿಗಾಗಿ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ತಲುಪಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು.

ಸಮಿತಿ ಸದಸ್ಯರಾದ ಕೆ.ಟಿ. ಬೇಬಿ ಮ್ಯಾಥ್ಯೂ ಅವರು ಮಾಹಿತಿ ನೀಡಿ, ಸರ್ಕಾರದಿಂದ ಅಲ್ಪಸಂಖ್ಯಾತರಿಗಾಗಿ ಸಾಕಷ್ಟು ಕಾರ್ಯಕ್ರಮಗಳು ಇದ್ದು, ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯ ೫ ತಾಲೂಕುಗಳಲ್ಲಿಯೂ ವಿಶೇಷ ಕಾರ್ಯಾಗಾರ ಏರ್ಪಡಿಸುವಂತಾಗಬೇಕು ಎಂದು ಕೋರಿದರು.

ಈ ಸಂದರ್ಭ ಮಾತನಾಡಿದ ಸಮಿತಿಯ ಸಹ ಕಾರ್ಯದರ್ಶಿ ವೀರಾಜಪೇಟೆಯ ಚಂದ್ರಪ್ರಸಾದ್ ಅವರು ಕೊಡಗು ಜಿಲ್ಲೆಯಲ್ಲಿ ಅತಿರ, ಬಿಕೆಬಿ, ಇಂಟಾನ್ ಭತ್ತ ಬಿತ್ತನೆ ಬೀಜಕ್ಕೆ ಬಹು ಬೇಡಿಕೆ ಇದೆ. ಆದರೆ ರೈತ ಸಂಪರ್ಕ ಕೇಂದ್ರಗಳಲ್ಲಿ ಕೃಷಿಕರಿಗೆ ಬೇಕಿರುವ ಭತ್ತ ಲಭ್ಯವಾಗುತ್ತಿಲ್ಲ ಎಂದು ವಿಷಯ ಪ್ರಸ್ತಾಪಿಸಿದರು. ಮೂರುವರೆ ಅಡಿಗಿಂತ ಹೆಚ್ಚು ಎತ್ತರ ಬೆಳೆಯುವ ಭತ್ತಕ್ಕೆ ಬೇಡಿಕೆ ಇದೆ. ಇದರಿಂದ ಮಳೆಯಿಂದ ರಕ್ಷಣೆ ಜೊತೆಗೆ ಜಾನುವಾರುಗಳಿಗೆ ಹುಲ್ಲುಗಾಗಿ ಅತಿರ, ಬಿಕೆಬಿ, ಇಂಟಾನ್ ಭತ್ತ ಬಿತ್ತನೆ ಬೀಜಕ್ಕೆ ಬೇಡಿಕೆ ಇದ್ದು, ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತ ಬಿತ್ತನೆ ಬೀಜ ದೊರೆಯಬೇಕು ಎಂದು ಮನವಿ ಮಾಡಿದರು.

ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಜಿಲ್ಲೆಯಲ್ಲಿ ಬೇಡಿಕೆ ಇರುವ ಭತ್ತ ಬಿತ್ತನೆ ಬೀಜಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸಿ ತರಿಸಿಕೊಳ್ಳುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನಾ ಎಂ. ಶೇಕ್ ಅವರು ಜಿಲ್ಲೆಗೆ ಬೇಡಿಕೆ ಇರುವ ಭತ್ತ ಬಿತ್ತನೆ ಬೀಜ ಪೂರೈಕೆಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದರು.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ದಿವಾಕರ ಅವರು ಪ್ರಧಾನಮಂತ್ರಿ ಅವರ ೧೫ ಅಂಶ ಕಾರ್ಯಕ್ರಮ ಬಗ್ಗೆ ವಿವರಿಸಿದರು. ಸಮಿತಿ ಸದಸ್ಯರಾದ ಅಬ್ದುಲ್ ಲತೀಪ್, ಜಿ.ಪಂ. ಸಿಇಓ ವರ್ಣಿತ್ ನೇಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿ.ಪಂ. ಯೋಜನಾ ನಿರ್ದೇಶಕ ಜಗದೀಶ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ. ಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್ ಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ ನಾಯಕ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕ ರಘು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯ ಪರಿವೀಕ್ಷಕಿ ಬಿಂದು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ರೂಪ, ಬಿಸಿಎಂ ಇಲಾಖೆ ಅಧಿಕಾರಿ ಎನ್. ಮಂಜುನಾಥ್, ಕಾರ್ಮಿಕ ಇಲಾಖೆಯ ಶಿರಾಜ್ ಅಹಮದ್ ಇತರರು ಇದ್ದರು.