ಪೊನ್ನಂಪೇಟೆ, ಆ. ೧೫: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದ ಸರ್ವ ಸದಸ್ಯರ ದ್ವಿತೀಯ ವರ್ಷದ ಮಹಾಸಭೆಯು ಸಂಘದ ಅಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ವೀರಾಜಪೇಟೆ ಕಾವೇರಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಸಭೆಯಲ್ಲಿ ಸಂಘದ ಸದಸ್ಯರಿಗೆ ಸರಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ಪಡೆಯಲು ಮತ್ತು ಅವರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಜಿಲ್ಲಾ ಸಂಘದ ವತಿಯಿಂದ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಂಘದ ಸದಸ್ಯರು ತಮ್ಮ ಸಮಸ್ಯೆಗಳನ್ನು ಸಂಘದ ಗಮನಕ್ಕೆ ತಂದು ಅದನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಮಡಿಕೇರಿಯಲ್ಲಿ ಸಂಘದ ಕಚೇರಿಯೊಂದನ್ನು ತೆರೆಯುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಮಹಾಸಭೆಯಲ್ಲಿ ಕುಟುಂಬ ಸಮೇತರಾಗಿ ಹಾಜರಿದ್ದ ಸಂಘದ ಸದಸ್ಯರು ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ಪರೀಕ್ಷೆ ಸ್ಟೇಟ್ ಸಿಲಬಸ್‌ನಲ್ಲಿ ಶೇಕಡ ೯೫ ಹಾಗೂ ಸಿಬಿಎಸ್‌ಸಿ ಸಿಲಬಸ್‌ನಲ್ಲಿ ಶೇಕಡ ೯೦ಕ್ಕಿಂತ ಹೆಚ್ಚು ಅಂಕ ಪಡೆದ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳು, ಕ್ರೀಡೆ, ಕಲೆ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಾಜಿ ಸೈನಿಕರು ಮತ್ತವರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಸುಧೀರ್, ಕಾರ್ಯದರ್ಶಿ ಪ್ರವೀಣ್ ಕುಮಾರ್, ಸಂಘಟನಾ ಕಾರ್ಯದರ್ಶಿ ಕುಟ್ಟಂಡ ಲವ, ಖಚಾಂಚಿ ತಿಮ್ಮಯ್ಯ, ಜಿಲ್ಲಾ ಮಹಿಳಾ ಸಂಚಾಲಕಿ ಮಾಚಿಮಂಡ ಭವಾನಿ ಸೇರಿದಂತೆ ಸಂಘದ ಸರ್ವ ಸದಸ್ಯರು ಹಾಜರಿದ್ದರು.
ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ ಅವರು, ಸಂಘದ ಸದಸ್ಯರ ಶ್ರೇಯೋಭಿವೃದ್ಧಿಯ ನಿಟ್ಟಿನಲ್ಲಿ ಮಹಾಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಅಲ್ಲದೇ, ಸಂಘದ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮಡಿಕೇರಿಯ ಮಹದೇವಪೇಟೆಯಲ್ಲಿ ಸಂಘದ ಕಚೇರಿಯೊಂದನ್ನು ತೆರೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.