ಸೋಮವಾರಪೇಟೆ, ಆ.೧೫ : ಹಿರಿಯ ನಾಯಕರು, ಕಾರ್ಯಕರ್ತರ ಶ್ರಮದಿಂದ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಿದ್ದಾರೆ. ರಾಜ್ಯದಲ್ಲಿ ೧೩೬ ಮಂದಿ ಕಾಂಗ್ರೆಸ್ ಶಾಸಕರಿದ್ದು, ಜನಪರ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ವೇಗ ನೀಡಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ರಾಷ್ಟçದಲ್ಲಿ ಅಧಿಕಾರ ಹಿಡಿಯಲಿದೆ. ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರು ಕೈಜೋಡಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ವಿಶ್ವಾಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಗೆದ್ದಿರುವುದು ಇಡೀ ರಾಜ್ಯ ಮತ್ತು ಪಕ್ಷದ ಹೈಕಮಾಂಡ್‌ಗೆ ಉತ್ತಮ ಸಂದೇಶ ರವಾನಿಸಿದಂತಾಗಿದೆ ಎಂದ ಅವರು, ಚುನಾವಣಾ ಪೂರ್ವ ಕಾಂಗ್ರೆಸ್ ನೀಡಿದ ೫ ಗ್ಯಾರಂಟಿಗಳನ್ನು ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಈಗಾಗಲೇ ಅಕ್ಕಿ ಹಾಗೂ ಹಣ ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಲಾಗಿದೆ. ಈಗಾಗಲೇ ೫೦ ಕೋಟಿ ಮಹಿಳೆಯರು ಇದರ ಪ್ರಯೋಜನ ಪಡೆದಿದ್ದಾರೆ. ಗೃಹಜ್ಯೋತಿ ಯೋಜನೆಯ ಮೂಲಕ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಗೃಹಲಕ್ಷಿö್ಮ ಯೋಜನೆಯಡಿ ೧.೬೮ ಕೋಟಿ ಮಹಿಳೆಯರಿಗೆ ತಲಾ ೨೦೦೦ ಸಾವಿರ ನೀಡಲಾಗುತ್ತಿದ್ದು, ಈ ಯೋಜನೆಗೆ ಪಕ್ಷದ ಹೈಕಮಾಂಡ್ ನಾಯಕರು ಇದೇ ತಿಂಗಳ ಅಂತ್ಯದಲ್ಲಿ ಚಾಲನೆ ನೀಡುವ ನಿರೀಕ್ಷೆಯಿದೆ. ಯುವ ನಿಧಿ ಯೋಜನೆಯ ಜಾರಿಗೆ ಡಿಸೆಂಬರ್‌ವರೆಗೆ ಕಾಲಾವಕಾಶವಿದ್ದು, ೫ ಗ್ಯಾರಂಟಿಗಳನ್ನು ಶೇ.೧೦೦ರಷ್ಟು ಅನುಷ್ಠಾನಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಪಕ್ಷದ ಕಾರ್ಯಕರ್ತರ ಶ್ರಮದಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸುವಲ್ಲಿ ಕಾರ್ಯಕರ್ತರು ಶ್ರಮವಹಿಸಬೇಕು. ಆ ಮೂಲಕ ಮುಂಬರುವ ತಾ.ಪಂ., ಜಿ.ಪಂ. ಸೇರಿದಂತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬೇಕು ಎಂದು ಉಸ್ತುವಾರಿ ಸಚಿವರು ಕರೆ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪದೋಷಗಳಿದ್ದರೆ ಗಮನಕ್ಕೆ ತರಬೇಕು ಎಂದ ಸಚಿವರು, ಕಾಂಗ್ರೆಸ್ ಪಕ್ಷವು ಎಲ್ಲಾ ಧರ್ಮ, ಜಾತಿ, ವರ್ಗದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಶಾಂತಿ, ಸೌಹಾರ್ದತೆಯೊಂದಿಗೆ ಸಮಗ್ರ ಅಭಿವೃದ್ಧಿ ನಮ್ಮ ಗುರಿಯಾಗಿದೆ ಎಂದ ಅವರು, ಸರ್ಕಾರದ ಯೋಜನೆಗಳನ್ನು ಒದಗಿಸಲು ಅಧಿಕಾರಿಗಳು ಹಣ ಕೇಳಿದರೆ ಕಠಿಣ ಕ್ರಮ ಜರುಗಿಸುತ್ತೇವೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ೫ ತಾಲೂಕುಗಳಲ್ಲಿಯೂ ಕೆಡಿಪಿ ಸಭೆ ನಡೆಸುತ್ತೇವೆ ಎಂದರು.

ಕೊಡಗಿನ ಸಮಸ್ಯೆಗಳ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಸಭೆಯಲ್ಲಿ ಚರ್ಚಿಸಲಾಗಿದೆ. ಶಾಸಕರುಗಳು ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಖಾಲಿ ಹುದ್ದೆಗಳ ಭರ್ತಿ, ಅರಣ್ಯ ಇಲಾಖೆ, ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳು, ಆಶ್ರಯ ಮನೆ ಯೋಜನೆ, ಪರಿಹಾರ ವಿತರಣೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂದಿನ ತಿಂಗಳು ರಾಜ್ಯ ಗೃಹ ಸಚಿವರನ್ನು ಕರೆಸಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ಶಾಸಕ ಡಾ. ಮಂಥರ್‌ಗೌಡ ಮಾತನಾಡಿ, ಚುನಾವಣೆ ಗೆಲುವಿನ ಬಳಿಕ ಜವಾಬ್ದಾರಿ ಹೆಚ್ಚಿದೆ. ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು. ಪ್ರಮುಖವಾಗಿ ಆಸ್ಪತ್ರೆ, ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಆಸ್ಪತ್ರೆಗೆ ೪ ಕೋಟಿ ಅನುದಾನ ಒದಗಿಸಲು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ ಮಂಥರ್‌ಗೌಡ, ಮುಂಬರುವ ಸೊಸೈಟಿ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಬಿಜೆಪಿಯನ್ನು ಸುಲಭವಾಗಿ ಮಣಿಸಬಹುದು. ತಾ.ಪಂ., ಜಿ.ಪಂ. ಗೆಲ್ಲಲು ವೈಯಕ್ತಿಕವಾಗಿಯೂ ಶ್ರಮಿಸಲಾಗುವುದು. ಸರ್ಕಾರಿ ಕೆಲಸ ಕಾರ್ಯ ಮಾಡಲು ಅಧಿಕಾರಿಗಳು ಸ್ಪಂದಿಸದಿದ್ದರೆ ಗಮನಕ್ಕೆ ತನ್ನಿ ಎಂದ ಅವರು, ಅಭಿವೃದ್ಧಿಯ ಮೂಲಕ ಬದಲಾವಣೆ ತರಲು ಪ್ರಯತ್ನಿಸಲಾಗುವುದು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ೨೦ ವರ್ಷದ ನಂತರ ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಿದ್ದಾರೆ. ಸಾರ್ವಜನಿಕರು ಹಾಗೂ ಕಾರ್ಯಕರ್ತರ ನಿರೀಕ್ಷೆ ಹೆಚ್ಚಿದೆ. ಕಾಂಗ್ರೆಸ್ ಗೆಲುವಿಗೆ ಇತರ ಪಕ್ಷಗಳ ಮುಖಂಡರೂ ಶ್ರಮಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಹಾಗೂ ಸರ್ಕಾರದ ಇತರ ಸೌಲಭ್ಯಗಳ ನಾಮನಿರ್ದೇಶನಕ್ಕೆ ಹಿರಿತನ, ಸೇವೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ಸೋಮವಾರಪೇಟೆ ಭಾಗದಲ್ಲಿ ಆಸ್ಪತ್ರೆ, ಕಂದಾಯ ಇಲಾಖೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವಲ್ಲಿ ಎಡವಿದ್ದರಿಂದಲೇ ಬಿಜೆಪಿ ಸೋಲನುಭವಿಸಿದೆ. ನಮ್ಮ ಅವಧಿಯಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಬೆಳೆಹಾನಿ ಪರಿಹಾರವನ್ನು ಏಕರೆಗೆ ಕನಿಷ್ಟ ೫೦ ಸಾವಿರ ನೀಡಲು ಕ್ರಮ ಕೈಗೊಳ್ಳಬೇಕೆಂದು ಉಸ್ತುವಾರಿ ಸಚಿವರ ಗಮನ ಸೆಳೆದರು.

ಹಿರಿಯ ಮುಖಂಡ ಟಿ.ಪಿ. ರಮೇಶ್ ಮಾತನಾಡಿ, ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬೇಕು. ಇದಕ್ಕೆ ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಬೇಕೆಂದು ಕರೆ ನೀಡಿದರು. ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ವಹಿಸಿದ್ದರು. ವೇದಿಕೆಯಲ್ಲಿ ಮುಖಂಡರಾದ ಸಂಜಯ್ ಜೀವಿಜಯ, ಎಸ್.ಎಂ. ಚಂಗಪ್ಪ, ಜಯೇಂದ್ರ, ಹೆಚ್.ವಿ. ಮಿಥುನ್, ಸುನಿಲ್, ಶಾಂತಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಉಸ್ತುವಾರಿ ಸಚಿವರನ್ನು ಕಾರ್ಯಕರ್ತರು ಸನ್ಮಾನಿಸಿದರು. ಸಾರ್ವಜನಿಕರಿಂದ ಶಾಸಕರು ಹಾಗೂ ಸಚಿವರು ಅಹವಾಲುಗಳನ್ನು ಸ್ವೀಕರಿಸಿದರು.