ಮಡಿಕೇರಿ, ಆ. ೧೭: ಮಾಜಿ ಪ್ರಧಾನಿ ಭಾರತ ರತ್ನ ರಾಜೀವ್ ಗಾಂಧಿಯವರ ೭೯ ನೇ ಹಾಗೂ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ರವರ ೧೦೮ ನೇ ಜನ್ಮ ದಿನಾಚರಣೆ ಮಡಿಕೇರಿ ನಗರದ ಅಂಬೇಡ್ಕರ್ ಭವನದಲ್ಲಿ ತಾ.೨೦ರಂದು ಪೂರ್ವಾಹ್ನ ೧೧ ಗಂಟೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸ್ ರಾಜ್ ಉಪಸ್ಥಿತಿಯಲ್ಲಿ ಆಚರಣೆ ಮಾಡಲಾಗುವುದು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಮಂಥರ್ ಗೌಡ ಭಾಗವಹಿಸಲಿದ್ದಾರೆ. ರಾಜೀವ್ ಗಾಂಧಿಯವರ ಬಗ್ಗೆ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಹಾಗೂ ದೇವರಾಜ್ ಅರಸು ರವರ ಬಗ್ಗೆ ಘಟಕದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯು ವಿಷಯ ಮಂಡನೆ ಮಾಡಲಿದ್ದಾರೆ ಎಂದು ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ಜಿಲ್ಲಾಡಳಿತ ವತಿಯಿಂದ
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೦೮ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ತಾ.೨೦ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಶಾಸಕ ಡಾ.ಮಂಥರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕೆÀ್ಷ ಎನ್.ಪಿ. ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಕೆ.ದಯಾನಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ ಇತರರು ಪಾಲ್ಗೊಳ್ಳಲಿದ್ದಾರೆ.
ಪತ್ರಿಕಾ ಭವನದಲ್ಲಿ
ಅಹಿಂದ ಒಕ್ಕೂಟ ಹಾಗೂ ಸಹಮತ ವೇದಿಕೆ ಆಶ್ರಯದಲ್ಲಿ ತಾ.೨೦ರಂದು ನಗರದ ಪತ್ರಿಕಾ ಭವನದಲ್ಲಿ ದಿ. ದೇವರಾಜ ಅರಸರ ೧೦೮ನೇ ಜನ್ಮದಿನಾಚರಣೆ ನಡೆಯಲಿದೆ. ಅಪರಾಹ್ನ ೨.೩೦ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಸಚಿವ ಎಂ.ಸಿ. ನಾಣಯ್ಯ ಉದ್ಘಾಟಿಸಲಿದ್ದಾರೆ. ಶಾಸಕರಾದ ಡಾ. ಮಂಥರ್‌ಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಮಾಡಿದವರ ಸನ್ಮಾನ ಕಾರ್ಯಕ್ರಮವನ್ನು ಶಾಸಕ ಎ.ಎಸ್. ಪೊನ್ನಣ್ಣ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.