=
ಮಡಿಕೇರಿ, ಆ.೨೦: ಉಳುವವನೇ ಭೂಮಿಯ ಒಡೆಯ, ಶಾಲಾ-ಕಾಲೇಜು ಆರಂಭ, ವಿದ್ಯಾರ್ಥಿ ನಿಲಯಗಳ ಸ್ಥಾಪನೆ, ಜೀತಪದ್ಧತಿ ನಿರ್ಮೂಲನೆ ಹೀಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಡವರಿಗೆ ಡಿ.ದೇವರಾಜ ಅರಸು ಅವರು ಹತ್ತಿರವಾಗಿದ್ದರು ಎಂದು ಶಾಸಕ ಡಾ.ಮಂಥರ್ ಗೌಡ ಸ್ಮರಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೦೮ ನೇ ಜನ್ಮ ದಿನಾಚರಣೆಯ ಸಭಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಹಿಂದುಳಿದ ವರ್ಗಗಳು ಹಾಗೂ ಇತರೆ ಸಣ್ಣ ಸಣ್ಣ ಸಮಾಜಗಳನ್ನು ಗುರ್ತಿಸಿ ಮೇಲೆತ್ತಲು ಶ್ರಮಿಸಿದ ಕೀರ್ತಿ ಡಿ.ದೇವರಾಜ ಅರಸು ಅವರಿಗೆ ಡಿ.ದೇವರಾಜ ಅರಸು ಅವರು ಬಡವರ ಬಗ್ಗೆ ಸದಾ ಸಾಮಾಜಿಕ ಕಳಕಳಿ ಹೊಂದಿದ್ದರು, ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದರು. ದೇವರಾಜ ಅರಸು ಅವರಂತೆ ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ ಧ್ವನಿಯಾಗಿ, ಹಿಂದುಳಿದ ವರ್ಗದವರ ಕಣ್ಮಣಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ೭೦ ರ ದಶಕದಲ್ಲಿ ಅರಸು ಅವರು ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಕಾರ್ಯಕ್ರಮಗಳು ಇಂದಿನ ಯುವಜನರು ಅನುಭವಿಸುತ್ತಿದ್ದಾರೆ. ಅರಸು ಅವರ ತತ್ವ, ಸಿದ್ದಾಂತ, ಮೌಲ್ಯ ಹಾಗೂ ಸಂದೇಶಗಳು ಸಾರ್ವಕಾಲಿಕವಾಗಿವೆ. ಗ್ರಾಮೀಣ ಬದುಕಿನೊಂದಿಗೆ ಆರಂಭವಾದ ಅವರ ಸಾಮಾಜಿಕ ಜೀವನ ಹಲವು ಏಳುಬೀಳುಗಳ ನಡುವೆಯೂ ರಾಜ್ಯದಲ್ಲಿ ಪ್ರಜ್ವಲಿಸಿ ಬಡವರಿಗೆ ಧ್ವನಿಯಾದರು. ಶಿಕ್ಷಣ, ಆರೋಗ್ಯ, ಸಾಮಾಜಿಕ ಬದಲಾವಣೆ ಹೀಗೆ ಹಲವು ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಿದರು ಎಂದರು.
ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಸಿ.ದಯಾನಂದ ಮಾತನಾಡಿ ಭೂಸುಧಾರಣಾ ಕಾಯ್ದೆ ಜಾರಿಗೊಳಿಸಿ, ರಾಜ್ಯದಲ್ಲಿ ಕ್ರಾಂತಿ ಉಂಟು ಮಾಡಿದರು. ಆಶ್ರಯ ಯೋಜನೆ, ಗ್ರಾಮೀಣ ಸಾಲ ಮನ್ನಾ, ಮನೆ ಮನೆಗೆ ವಿದ್ಯುತ್ ಸಂಪರ್ಕ ಹೀಗೆ ಹಲವು ಕಾರ್ಯಕ್ರಮ ಜಾರಿಗೊಳಿಸಿದರು. ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಆಡಳಿತ ಭಾಷೆಯನ್ನಾಗಿ ಜಾರಿಗೊಳಿಸಿದರು. ಅರಸು ಅವರು ಸಮಾಜ ಸುಧಾರಣೆಗೆ ಪ್ರಯತ್ನಿಸಿದರು. ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಕಡಿಮೆ ಮಾಡಲು ಶ್ರಮಿಸಿದರು ಎಂದು ಸ್ಮರಿಸಿದರು.
ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ಮಾತನಾಡಿ ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸು ಅವರು ರಾಜ್ಯದಲ್ಲಿ ಹಲವು ಭೂ ಸುಧಾರಣಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿ, ರಾಜ್ಯವನ್ನು ಪ್ರಗತಿಪಥದತ್ತ ಕೊಂಡೊಯ್ಯಲು ಶ್ರಮಿಸಿದರು, ತಾಲೂಕು ಭೂ ಮಂಡಳಿ ಕಾಯ್ದೆಯನ್ನು ಜಾರಿಗೊಳಿಸಿದರು ಎಂದು ವರ್ಣಿಸಿದರು.
ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಗೆ ಬರುವ ವಸತಿ ಶಾಲೆಗಳು ಮತ್ತು ವಸತಿ ನಿಲಯಗಳಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಾಗೆಯೇ ಶಾಸಕ ಡಾ.ಮಂತರ್ ಗೌಡ, ಪ್ರಾಂಶುಪಾಲ ಕೆ.ಸಿ.ದಯಾನಂದ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್, ಸದಸ್ಯ ರಾಜೇಶ್ ಯಲ್ಲಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮುನಿರ್ ಅಹಮದ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಕೃಷಿ ಇಲಾಖೆ ಉಪ ನಿರ್ದೇಶಕರಾದ ಬಾಲರಾಜ್ ರಂಗರಾವ್, ಡಿಡಿಪಿಯು ಪುಟ್ಟರಾಜು ಇತರರು ಇದ್ದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಸ್ವಾಗತಿಸಿದರು. ಆಲೂರು ಸಿದ್ದಾಪುರ ವಸತಿ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಪ್ರಾಂಶುಪಾಲರಾದ ಭಾರತಿ ನಿರೂಪಿಸಿದರು. ಭಾಗಮಂಡಲ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಲೋಕೇಶ್ ವಂದಿಸಿದರು.