ಸೋಮವಾರಪೇಟೆ, ೨೭: ಮೈಸೂರು ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆ (ಡಯಟ್)ಯ ಹಿರಿಯ ಉಪನ್ಯಾಸಕ (ಶಿಕ್ಷಣಾಧಿಕಾರಿ ತತ್ಸಮಾನ ಹುದ್ದೆ) ರಾಗಿ ವರ್ಗಾವಣೆಗೊಂಡ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಅವರಿಗೆ ತಾಲೂಕಿನ ವಿವಿಧ ಶಿಕ್ಷಕರ ಸಂಘಟನೆಗಳು ಹಾಗೂ ಬಿಇಓ ಕಚೇರಿಯ ಸಿಬ್ಬಂದಿ ವತಿಯಿಂದ ಬೀಳ್ಕೊಡಲಾಯಿತು.

ಪ್ರೌಢಶಾಲಾ ಸಹ ಶಿಕ್ಷಕರ ಜಿಲ್ಲಾ ಹಾಗೂ ತಾಲೂಕು ಘಟಕ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸೇರಿದಂತೆ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿ.ಆರ್.ಪಿ.ಗಳು ಹಾಗೂ ಕಚೆೆÃರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ವತಿಯಿಂದ ಬಿಇಓ ಕಚೇರಿಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಬಿಇಓ ಸುರೇಶ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಮಾತನಾಡಿದ ಬಿಇಓ ಕೆ.ವಿ.ಸುರೇಶ್, ಪ್ರತಿಯೊಬ್ಬರೂ ಆಡಳಿತ ಹಂತದಲ್ಲಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಪರಸ್ಪರ ಸಹಕಾರ ಮನೋಭಾವ ಮತ್ತು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿದರೆ ನಿಗದಿತ ಜವಾಬ್ದಾರಿ ಮತ್ತು ನಿರ್ವಹಣೆ ಮೂಲಕ ನಿರೀಕ್ಷಿತ ಗುರಿ ಹಾಗೂ ಫಲಪ್ರದ ಸಾಧನೆ ಮಾಡಲು ಸಾಧ್ಯ ಎಂದರು.

ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಪ್ರಭಾರ ಬಿಇಓ ಎಂ.ವಿ. ಮಂಜೇಶ್, ಬಿ ಆರ್ ಸಿ ಜಿ.ಎಂ. ಹೇಮಂತ್, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಎಚ್.ಎಸ್. ಚೇತನ್, ತಾಲೂಕು ಘಟಕದ ಅಧ್ಯಕ್ಷ ಟಿ.ಕೆ. ಬಸವರಾಜ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್.ಜಿ. ಕುಮಾರ್, ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ತಾಲೂಕು ಘಟಕದ ಅಧ್ಯಕ್ಷ ಕೆ.ಆರ್. ರತ್ನಕುಮಾರ್, ತಾಲೂಕು ಬೋಧಕೇತರ ನೌಕರರ ಸಂಘದ ಅಧ್ಯಕ್ಷ ಎಚ್.ಆರ್. ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.