ಮಡಿಕೇರಿ, ಸೆ. ೧ : ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಸಮಾವೇಶವು ತಾ. ೫ ರಂದು ನಡೆಯಲಿದೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರೂ, ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ, ಸಣ್ಣ ನೀರಾವರಿ ಸಚಿವ ಬೋಸರಾಜು, ಇಂಧನ ಸಚಿವ ಕೆ.ಜೆ. ಜಾರ್ಜ್ ಜಿಲ್ಲೆಯ ವಿಧಾನಪರಿಷತ್ ಸದಸ್ಯರೂ, ರಾಜ್ಯ ಹಾಗೂ ಜಿಲ್ಲಾ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಪಕ್ಷಕ್ಕಾಗಿ ನಿರಂತರವಾಗಿ ದುಡಿದ ಪಕ್ಷದ ಆರು ಬ್ಲಾಕ್ನ ಆರು ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಉಪಾಧ್ಯಕ್ಷ ಎಂ.ಎA. ಇಸ್ಮಾಯಿಲ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕಲೀಲ್ ಬಾಷ, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ರಫೀಕ್ ಕೋಳುಮಂಡ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಶುಬೈರ್ ಕಡಂಗ, ಕಾಂಗ್ರೆಸ್ ಮುಖಂಡ ಜೋಕಿಂ ಉಪಸ್ಥಿತರಿದ್ದರು.