ಕೊಡ್ಲಿಪೇಟೆ, ಸೆ. ೬ : ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜಿಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಬುಧವಾರ ಭೇಟಿದ್ದರು. ಸಚಿವರು ಶಾಲಾ ಆವರಣದಲ್ಲಿ ಗಿಡ ನೆಟ್ಟು ನೀರು ಹಾಕಿ ಪರಿಸರ ಜಾಗೃತಿ ಮೂಡಿಸಿ ಮಾತನಾಡಿದ ಅವರು ದಿನನಿತ್ಯ ತ್ಯಾಜ್ಯ, ಪ್ಲಾಸ್ಟಿಕ್ ಹಾಗೂ ವಾಹನಗಳಿಂದ ಹೊರಬರುತ್ತಿರುವ ಹೊಗೆಯಿಂದ ಆಗುತ್ತಿರುವ ಮಾಲಿನ್ಯವನ್ನು ತಡೆಗಟ್ಟಬೇಕಾಗಿದೆ. ಪ್ರತಿಯೊಬ್ಬರೂ ಈ ವರ್ಷ ಮಣ್ಣಿನಿಂದ ಮಾಡಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಕೆ ಮಾಡುವ ಮೂಲಕ ಗಣೇಶ ಉತ್ಸವ ಆಚರಿಸಬೇಕು ಎಂದು ಸಲಹೆ ನೀಡಿದರು.
ರಾಸಾಯನಿಕಯುಕ್ತ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳನ್ನು ಉಪಯೋಗಿಸಿದರೆ ಪರಿಸರಕ್ಕೆ ಹಾನಿಯಾಗುವುದರ ಜೊತೆಗೆ ಜನರಿಗೆ ಅಪಾಯ ಉಂಟಾಗುತ್ತದೆ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು. ಪರಿಸರ ಸಂರಕ್ಷಣೆ ಹಾಗೂ ಜಾಗೃತಿಗಾಗಿ ಈ ವರ್ಷ ರಾಜ್ಯಾದ್ಯಂತ ಸುಮಾರು ೫ ಕೋಟಿಗೂ ಹೆಚ್ಚಿನ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭ ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷರೂ ಆದ ಹೈಕೋರ್ಟ್ ಹಿರಿಯ ವಕೀಲ ಎಚ್.ಎಸ್.ಚಂದ್ರಮೌಳಿ, ಕೊಡಗು ಜಿಲ್ಲಾ ಕಾಂಗ್ರೆಸ್ ಸದಸ್ಯ ಲಕ್ಷö್ಮಣ್, ಕೊಡ್ಲಿಪೇಟೆ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಖಜಾಂಜಿ ಡಾ.ಉದಯಕುಮಾರ್, ನಿರ್ದೇಶಕರಾದ ಯು.ವಿ.ಶಿವಪ್ರಸಾದ್, ಬಿ.ಕೆ. ಯತೀಶ್, ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನೀಫ್, ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಪಿ. ಪ್ರಫುಲ್ ಶೆಟ್ಟಿ, ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಆರ್. ನಿರಂಜನ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎಸ್.ಪವರ್, ಪ್ರೌಢಶಾಲೆ ಮುಖ್ಯ ಶಿಕ್ಷಕ ಎಂ.ಎನ್.ಅಬ್ದುಲ್ ರಬ್ ಹಾಗೂ ಸಿಬ್ಬಂದಿ ವರ್ಗ ಇದ್ದರು. ಇದೇ ಸಂದರ್ಭ ಸಚಿವ ಈಶ್ವರ್ ಖಂಡ್ರೆ ಅವರನ್ನು ವಿದ್ಯಾಸಂಸ್ಥೆಯ ಪರವಾಗಿ ಅಧ್ಯಕ್ಷ ಚಂದ್ರಮೌಳಿ ಅವರು ಸನ್ಮಾನಿಸಿ ಗೌರವಿಸಿದರು.