ಕುಶಾಲನಗರ, ಸೆ. ೬: ಸರ್ಕಾರದ ಜನ ವಿರೋಧಿ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಿಲುವು ಹೊಂದಿದೆ ಎಂದು ಆರೋಪಿಸಿ ಕುಶಾಲನಗರದಲ್ಲಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೆಚ್.ಬಿ. ರಮೇಶ್ ಮತ್ತು ಶಾಖಾ ಕಾರ್ಯದರ್ಶಿ ಪಿ.ಆರ್. ಭರತ್ ಅವರ ನೇತೃತ್ವದಲ್ಲಿ ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಕೂಡಲೇ ಎಲ್ಲಾ ಅಗತ್ಯ ವಸ್ತುಗಳು ಮತ್ತು ಜನರ ಔಷಧಿಗಳ ಬೆಲೆಗಳ ಮೇಲೆ ನಿಯಂತ್ರಣ ಮರು ಸ್ಥಾಪಿಸಬೇಕು. ಪೆಟ್ರೋಲ್, ಡೀಸೆಲ್ ಬೆಲೆಗಳ ಮೇಲಿನ ತೆರಿಗೆಗಳನ್ನು ಕಡಿತ ಮಾಡಬೇಕು. ಅನ್ನಭಾಗ್ಯಕ್ಕೆ ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡಬೇಕು. ವಿದ್ಯುತ್ ರಂಗದ ಖಾಸಗೀಕರಣ ಕೈಬಿಡಬೇಕು. ಕೇಂದ್ರದಿAದ ರಾಜ್ಯಕ್ಕೆ ನೀಡುವ ತೆರಿಗೆ ಪಾಲು ನೀಡಿಕೆಯ ತಾರತಮ್ಯ ತೊಲಗಿಸಬೇಕು. ಕಾಡಾನೆ ಹಾವಳಿಗೆ ಸರ್ಕಾರ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಿ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೊಡಗು ಜಿಲ್ಲೆಗೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ಕಾರ ಶೀಘ್ರಗತಿಯಲ್ಲಿ ಮುಂದಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಶಿವಪ್ಪ, ಶಿವರಾಂ, ಚಂದ್ರನ್, ಉದಯ, ಮೋನಪ್ಪ ಮತ್ತಿತರರು ಇದ್ದರು.