ಪೊನ್ನಂಪೇಟೆ, ಸೆ. ೬ : ವೀರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಕೊಳತೋಡು- ಬೈಗೋಡು ಬಳಿ ಪಿಕಪ್ ವಾಹನ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವ್ಯಕ್ತಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಪೊನ್ನಂಪೇಟೆಯಲ್ಲಿ ವಾಸವಾಗಿದ್ದ ಇಲ್ಲಿನ ಯೂನಿಯನ್ ಬ್ಯಾಂಕ್ ಉದ್ಯೋಗಿ ಜಯ ಎಂಬವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದೇ ಸ್ಥಳದಲ್ಲಿ ಸರ್ಕಾರಿ ಬಸ್ವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ. ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.