ಮಡಿಕೇರಿ, ಸೆ. ೧೦: ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ನಡೆಯಿತು.
ನಗರಸಭೆಯ ಪೌರಕಾರ್ಮಿಕರಿಗೆ ಸ್ವೆಟರ್ ವಿತರಣೆ ಮಾಡಲಾಯಿತು. ಅಲ್ಲದೇ ಶಕ್ತಿ ವೃದ್ಧಾಶ್ರಮದ ಹಿರಿಯರಿಗೆ ವಸ್ತç ವಿತರಿಸÀಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಉಪಮುಖ್ಯ ವೈದ್ಯಾಧಿಕಾರಿ ಹೆಚ್.ವಿ. ದೇವದಾಸ್ ಮಾತನಾಡಿ, ಅಂಬೇಡ್ಕರ್ ಅವರಿಂದ ಎಲ್ಲವನ್ನೂ ಪಡೆದುಕೊಂಡ ನಾವು ಸಮಾಜದ ದೀನದಲಿತರ ಬದುಕನ್ನು ಹಸನಾಗಿಸಲು ಶ್ರಮಪಡಬೇಕು ಎಂದು ನುಡಿದರು. ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ದಲಿತ ಸಂಘರ್ಷ ಸಮಿತಿಯು ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು, ಆಶ್ರಮದ ಹಿರಿಯರಿಗೆ ಒಂದು ದಿನ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಏರ್ಪಡಿಸಿದಲ್ಲಿ ತಾನು ಕೂಡ ಒಬ್ಬ ವೈದ್ಯನಾಗಿ ಬಂದು ಅವರ ಸೇವೆ ಮಾಡುತ್ತೇನೆ ಎಂದು ಭರವಸೆಯಿತ್ತರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಕೊಡಗು ಮೆಡಿಕಲ್ ಕಾಲೇಜಿನ ಸ್ಥಾನೀಯ ವೈದ್ಯಾಧಿಕಾರಿ ಡಾ. ಸತೀಶ್ ಮಾತನಾಡಿ, ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ದೇಶದ ಜನತೆಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ ಎಂದು ನುಡಿದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ ಮತ್ತೋರ್ವ ಅತಿಥಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ಅಂಬೇಡ್ಕರ್ ಅವರ ಜಯಂತಿಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ ಅವರ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು ಎಂದರು.
ವೇದಿಕೆಯಲ್ಲಿ ದಸಂಸ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ನಗರ ಸಂಚಾಲಕ ಸಿ.ಪಿ. ಸಿದ್ದೇಶ್ವರ, ಸಂಘಟನಾ ಸಂಚಾಲಕ ಲೋಕನಾಥ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಸಂಚಾಲಕ ದಿವಾಕರ್ ಹೆಚ್.ಎಲ್. ಮಾತನಾಡಿ, ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳ ಬಗ್ಗೆ ತಿಳಿದುಕೊಳ್ಳಬೇಕೆಂದರು.