ಸೋಮವಾರಪೇಟೆ, ಸೆ. ೧೧: ರಾಜ್ಯ ಸರ್ಕಾರವು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಪಟ್ಟಣದ ಪುಟ್ಟಪ್ಪ ವೃತ್ತದಿಂದ ತಾಲೂಕು ಕಚೇರಿವರೆಗೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದ ಪಕ್ಷದ ಕಾರ್ಯಕರ್ತರು, ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ನರಗುಂದ್ ಅವರ ಮೂಲಕ ಮನವಿ ಸಲ್ಲಿಸಿದರು.
ಈ ಸಂದರ್ಭ ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ರೈತರನ್ನು ಕಡೆಗಣಿಸುತ್ತಿದೆ. ಅಧಿಕಾರಕ್ಕೆ ಬಂದ ನೂರು ದಿನಕ್ಕೆ ರಾಜ್ಯದಲ್ಲಿ ನೂರಾರು ಸಮಸ್ಯೆಗಳು ತಲೆದೋರಿವೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಪ್ರೋತ್ಸಾಹ ಧನ ನೀಡುತ್ತಿದ್ದು, ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವೂ ನಾಲ್ಕು ಸಾವಿರ ರೂಪಾಯಿಗಳನ್ನು ನೀಡುತ್ತಿತ್ತು. ವಾರ್ಷಿಕ ರೂ. ೧೦ ಸಾವಿರ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತಿತ್ತು. ಈ ಹಣವನ್ನು ಈಗಿನ ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಆರೋಪಿಸಿದರು.
ಇದರೊಂದಿಗೆ ರೈತರ ಮಕ್ಕಳಿಗೆ ನೀಡುತ್ತಿದ್ದ ರೈತ ವಿದ್ಯಾ ನಿಧಿಯನ್ನು ಸ್ಥಗಿತಗೊಳಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಶ್ರಮಶಕ್ತಿ ರೈತ ಸಂಪದ, ಜಿಲ್ಲೆಗೊಂದು ಗೋ ಶಾಲೆ, ಎಪಿಎಂಸಿ ಕಾಯಿದೆ, ಕೃಷಿಭೂಮಿ ಮಾರಾಟ ಕಾಯಿದೆಯನ್ನೆಲ್ಲಾ ಕೈಬಿಡುವ ಮೂಲಕ ರೈತರ ಹಿತವನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿದೆ ಎಂದು ಆರೋಪಿಸಿದರು.
ರೈತರ ಕೃಷಿ ಭೂಮಿಯಲ್ಲಿರುವ ಕೊಳವೆ ಹಾಗೂ ತೆರೆದ ಬಾವಿಯಿಂದ ಕೃಷಿ ಚಟುವಟಿಕೆಗೆ ನೀರೆತ್ತಲು ದಿನಕ್ಕೆ ಕನಿಷ್ಟ ೭ ಗಂಟೆ ವಿದ್ಯುತ್ ಒದಗಿಸಬೇಕು. ರಾಜ್ಯದಲ್ಲಿ ೧೪೩ಕ್ಕೂ ಹೆಚ್ಚಿನ ತಾಲೂಕುಗಳಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ನಿರ್ಮಾಣ ಗೊಂಡಿದೆ. ಇಂತಹ ತಾಲೂಕುಗಳಲ್ಲಿ ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ೪೨ ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ನೆರವಿಗೆ ಬರುವುದರೊಂದಿಗೆ ಅವರನ್ನು ಆರ್ಥಿಕವಾಗಿ ಸಶಕ್ತರನ್ನಾಗಿಸುವ ಮೂಲಕ ಅವರಲ್ಲಿ ಧೈರ್ಯ ತುಂಬುವ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿದ ರಂಜನ್, ತಕ್ಷಣ ರೈತ ವಿರೋಧಿ ಕಾಯಿದೆಗಳನ್ನು ಹಿಂಪಡೆಯಬೇಕು. ರೈತರಿಗೆ ಸಹಾಯ ವಾಗುವ ಯೋಜನೆಗಳನ್ನು ಮುಂದು ವರೆಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಮಂಡಲ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಮಚ್ಚಂಡ ಪ್ರಕಾಶ್ ಬೆಳ್ಯಪ್ಪ, ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಮಾಜಿ ಜಿಲ್ಲಾಧ್ಯಕ್ಷ ಭಾರತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.