ಕೂಡಿಗೆ, ಸೆ. ೧೪: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯ ಮುಂಭಾಗದಲ್ಲಿರುವ ಬೃಂದಾವನ ಉದ್ಯಾನವನ ಅಭಿವೃದ್ಧಿಗೆ ಹಾರಂಗಿ ನೀರಾವರಿ ಇಲಾಖೆಯ ಮೂಲಕ ರಾಜ್ಯ ಸರಕಾರಕ್ಕೆ ೫ ಕೋಟಿಯ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ.

ಜಿಲ್ಲೆಗೆ ಹೆಚ್ಚು ರಾಜ್ಯ ಮತ್ತು ಅಂತರರಾಜ್ಯದ ಪ್ರವಾಸಿಗರು ಬರುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಪ್ರವಾಸಿಗರು ದುಬಾರೆ ಸಾಕಾನೆ ಶಿಬಿರಕ್ಕೆ ಭೇಟಿ ನೀಡಿದ ನಂತರ ಹಾರಂಗಿಯ ಅಣೆಕಟ್ಟೆಯ

ವೀಕ್ಷಣೆ ಮತ್ತು ಹೊಸದಾಗಿ ಆರಂಭಗೊAಡಿರುವ ಸಾಕಾನೆ ಶಿಬಿರಕ್ಕೆ ಭೇಟಿ ನೀಡುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಮುಂಭಾಗದಲ್ಲಿರುವ ಬೃಂದಾವನ ಉದ್ಯಾನದ ಅಭಿವೃದ್ಧಿಯ ಕಾಮಗಾರಿಗಳು ಮತ್ತು ಸಂಜೆಯ ಸಮಯದಲ್ಲಿ ಪ್ರವಾಸಿಗರಿಗೆ ವೀಕ್ಷಣೆಗೆ ಇರುವ ಸಂಗೀತ ಕಾರಂಜಿಯನ್ನು ಇನ್ನೂ ಹೆಚ್ಚಿನ ಆಧುನಿಕ ತಂತ್ರಜ್ಞಾನದ ಮೂಲಕ ಅಭಿವೃದ್ಧಿಪಡಿಸುವ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದ್ದು, ಅದರ ಮೂಲಕ ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಒದಗಿಸುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ದೃಷ್ಟಿಯಿಂದ ನೀರಾವರಿ ಇಲಾಖೆಯ ಮುಖೇನ ಸರಕಾರಕ್ಕೆ ರೂ. ೫ ಕೋಟಿಯ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಈಗಾಗಲೇ ರಾಜ್ಯ ಮಟ್ಟದಲ್ಲಿ ಅಂದಾಜು ಪಟ್ಟಿಯು ಸಿದ್ಧಗೊಂಡಿದ್ದು, ಮುಂದಿನ ದಿನಗಳಲ್ಲಿ ಕ್ರಿಯಾ ಯೋಜನೆ ಮೂಲಕ ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ ಎಂದು ಸಹಾಯಕ ಕಾರ್ಯಪಾಲಕ ಅಭಿಯಂತರ ಐ.ಕೆ. ಪುಟ್ಟಸ್ವಾಮಿ ತಿಳಿಸಿದ್ದಾರೆ. -ಕೆ.ಕೆ. ನಾಗರಾಜಶೆಟ್ಟಿ