ಮಡಿಕೇರಿ, ಸೆ. ೧೭: ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಮಾಲಿನ್ಯಕಾರಿ ಪಿ.ಓ.ಪಿ.ಹಾಗೂ ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಗಳನ್ನು ತ್ಯಜಿಸಿ ಪರಿಸರ ಸ್ನೇಹಿ, ಮಣ್ಣಿನ ಗಣೇಶ ಮೂರ್ತಿ ಬಳಕೆ ಮಾಡುವ ಮೂಲಕ ಜಲಮಾಲಿನ್ಯ ತಡೆದು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕೆ.ಎಂ.ಸತೀಶ್ ಕುಮಾರ್ ಶನಿವಾರ ಮಡಿಕೇರಿಯಲ್ಲಿ ಹೇಳಿದರು.

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಮಡಿಕೇರಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ( ಎನ್‌ಎಸ್‌ಎಸ್)ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ನ ಆಶ್ರಯದಲ್ಲಿ "ನಮ್ಮ ನಡೆ ಹಸಿರೆಡೆಗೆ" ಅಭಿಯಾನ: ೨೦೨೪ ದಡಿ (ಗೋ ಗ್ರೀನ್ ಕ್ಯಾಂಪೈನ್) ಶನಿವಾರ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಅಭಿಯಾನ:೨೦೨೩ ದಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ಕೊಡಗಿನಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಪರಿಸರ ಸ್ನೇಹಿ ಗಣೇಶೋತ್ಸವವನ್ನು ಸಂಘಟಿಸುತ್ತಾ ಬರುತ್ತಿರುವುದು ರಾಜ್ಯಕ್ಕೆ ಮಾದರಿಯಾಗಿದೆ. ಇದಕ್ಕೆ ಕಾರಣರಾದ ಪರಿಸರ ಸಂಘಟನೆಯ ಪ್ರಮುಖರು ಮತ್ತು ಸಂಗಡಿಗರು ಜತೆಗೂಡಿ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯವಾದುದು ಎಂದರು.

ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್‌ನ ಘಟಕದ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಗಣೇಶ ಚತುರ್ಥಿ ಸಂದರ್ಭದಲ್ಲಿ ಮಾಲಿನ್ಯ ರಹಿತ ಹಾಗೂ ರಾಸಾಯನಿಕ ಮುಕ್ತ ಪರಿಸರ ಪೂರಕ ಮಣ್ಣಿನ ಗಣೇಶ ಮೂರ್ತಿಯನ್ನು ಮಾತ್ರ ಬಳಕೆ ಮಾಡುವ ಕುರಿತು ಶಾಲಾ- ಕಾಲೇಜು ಹಾಗೂ ನಾಗರಿಕರಲ್ಲಿ ಜನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಕಾರದೊಂದಿಗೆ ಕಳೆದ ೧೨ ವರ್ಷಗಳಿಂದ ನಿರಂತರವಾಗಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಹಾಗೂ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲಾಗುತ್ತಿದೆ ಎಂದು ತಿಳಿಸಿದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಹಾಗೂ ಡಿಡಿಪಿಐ ಸೌಮ್ಯ ಪೊನ್ನಪ್ಪ ಬಹುಮಾನ ವಿತರಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಅಧಿಕಾರಿ ಡಾ.ಎಂ.ಎನ್.ಪ್ರಕಾಶ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಪದಾಧಿಕಾರಿ ಎಂ.ಡೈಸಿ, ಸಂಸ್ಥೆಯ ಉಪ ಪ್ರಾಂಶುಪಾಲರಾದ ಕೆ.ವಿ.ಶಶಿಕಲಾ, ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಐ.ಜೆ.ಜೆನೆಟ್, ಶಿಕ್ಷಕಿಯರಾದ ಸೌಮ್ಯಲತಾ, ಐರಿನ್ ಉಷಾ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮಕ್ಕಳು ಸ್ವತಃ ಮಣ್ಣಿನಿಂದ ಮತ್ತು ಅಕ್ಕಿಹಿಟ್ಟು ಹಾಗೂ ಗೋಧಿ ಹಿಟ್ಟಿನಿಂದ ತಯಾರಿಸಿ ಪ್ರದರ್ಶಿಸಿದ್ದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳು ಪ್ರೇಕ್ಷಕರ ಗಮನ ಸೆಳೆದವು.