ವೀರಾಜಪೇಟೆ, ಸೆ. ೨೮: ಕಡಂಗಮುರೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಅಮ್ಮಂಡ ಸುಬ್ರಮಣಿ (೮೦) ದಾಳಿಗೊಳಗಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಿಗ್ಗೆ ಹಾಲು ತರಲು ಮನೆಯಿಂದ ಅಂಗಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಡಂಗಮುರೂರು ಭದ್ರಕಾಳಿ ದೇವಾಲಯದ ಬಳಿ ಕಾಡಾನೆ ಎದುರಾಗಿ ದಾಳಿ ನಡೆಸಿ ಅಲ್ಲಿಂದ ಕಾಲ್ಕಿತ್ತಿದೆ. ತೀವ್ರ ಅಸ್ವಸ್ಥಗೊಂಡು ಕುಸಿದುಬಿದ್ದ ಸುಬ್ರಮಣಿ ಕೆಲ ಗಂಟೆಯ ನಂತರ ಎಚ್ಚರಗೊಂಡು ಪಕ್ಕದಲ್ಲಿದ್ದ ಕುಟುಂಬಸ್ಥರ ಮನೆ ಬಳಿ ತೆರಳಿದ್ದಾರೆ. ನಂತರ ಕುಟುಂಬಸ್ಥರು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿಯಿಂದ ಕಾಲಿಗೆ ಹಾಗೂ ಬೆನ್ನು ಮೂಳೆಗೆ ತೀವ್ರ ಪೆಟ್ಟಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಭಾಗದಲ್ಲಿ ಪ್ರತ್ಯಕ್ಷವಾಗಿರುವ ಕಾಡಾನೆಗಳನ್ನು ಕಾಡಿಗಟ್ಟಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ವಕ್ತಾರ ಸಂಕೇತ್ ಪೂವಯ್ಯ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭ ಕಾಕೋಟುಪರಂಬು ಕಾಂಗ್ರೆಸ್ ವಲಯಾಧ್ಯಕ್ಷ ಮಂಡೇಟಿರ ಅನಿಲ್ ಇದ್ದರು.
ಘಟನೆ ಕುರಿತು ಪ್ರತಿಕ್ರಿಯಿಸಿದ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಉತ್ತಮ ಚಿಕಿತ್ಸೆ ನೀಡಲು ಸೂಚಿಸಿ, ಗಾಯಾಳುವಿಗೆ ತಕ್ಷಣವೇ ಪರಿಹಾರ ವಿತರಿಸಲು ನಿರ್ದೇಶನ ನೀಡಿ ಕಾಡಾನೆಯ ಸೆರೆಗೆ ತಕ್ಷಣ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ತಿಳಿಸಿದರು.