ಸೋಮವಾರಪೇಟೆ, ಸೆ. ೩೦: ಸಮಾಜದ ಶ್ರೇಷ್ಠ ವ್ಯಕ್ತಿಗಳ ಸಾಲಿನಲ್ಲಿ ಶಿಕ್ಷಕರಿಗೆ ಅಗ್ರಸ್ಥಾನವಿದ್ದು, ಸರ್ವರಿಗೂ ಸಮಾನ ಶಿಕ್ಷಣ ನೀಡುವ ಕೆಲಸ ಮಾಡುತ್ತಿದ್ದಾರೆ. ಶಿಕ್ಷಕರು ಸ್ವಾರ್ಥಿಗಳಾಗದೆ, ತಾವು ಕಲಿತ ವಿದ್ಯೆಯನ್ನು ವಿದ್ಯಾರ್ಥಿಗಳಿಗೆ ಹಂಚುವ ಮೂಲಕ ಯಾವುದೇ ಜಾತಿ-ಧರ್ಮದ ತಾರತಮ್ಯವಿಲ್ಲದೆ ಕರ್ತವ್ಯನಿರತರಾಗಿದ್ದಾರೆ ಎಂದು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಸೀನಪ್ಪ ಅಭಿಮತ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ, ಸೋಮವಾರಪೇಟೆ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ-ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಕೊಡಗು ಜಿಲ್ಲೆಯದೇ ಆದ ವಿಶ್ವವಿದ್ಯಾನಿಲಯವು ಅಳುವಾರದಲ್ಲಿ ಪ್ರಾರಂಭವಾಗಿದ್ದು, ಎಲ್ಲರಿಗೂ ಉತ್ತಮ ಶಿಕ್ಷಣ ನೀಡುವ ಕೆಲಸ ಮಾಡುತ್ತಿದೆ. ಜಿಲ್ಲೆಯ ೨೩ ಕಾಲೇಜುಗಳು ಈ ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟಿದ್ದು, ೧೭ ವಿವಿಧ ಕೋರ್ಸ್ಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಮುಂದೆಯೂ ಹಲವಾರು ನೂತನ ಕೋರ್ಸ್ಗಳನ್ನು ಕಾಲೇಜಿನಲ್ಲಿ ಅಳವಡಿಸಲು ಮುಂದಾಗಿದ್ದು, ಜಿಲ್ಲೆಯ ಸಾರ್ವಜನಿಕರು ವಿಶ್ವವಿದ್ಯಾನಿಲಯದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮವನ್ನು ತಹಶೀಲ್ದಾರ್ ಎಸ್.ಎನ್. ನರಗುಂದ ಉದ್ಘಾಟಿಸಿ ಮಾತನಾಡಿ, ಪ್ರತಿಯೋರ್ವ ವ್ಯಕ್ತಿಯ ಜೀವನ ರೂಪುಗೊಳ್ಳುವುದು ಆತನ ಶಿಕ್ಷಣದಿಂದ. ಅಂತಹ ಶಿಕ್ಷಣವನ್ನು ನೀಡುವ ಶಿಕ್ಷಕರು ಸಮಾಜದಲ್ಲಿ ಬಹುದೊಡ್ಡ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಸಮಾಜದ ಗೌರವಕ್ಕೂ ಪಾತ್ರರಾಗಿದ್ದಾರೆ ಎಂದರು.
ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮಾತನಾಡಿ, ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡುತ್ತಿರುವ ಶಿಕ್ಷಕರು ಸಾಕಷ್ಟು ಸಮಸ್ಯೆಗಳ ನಡುವೆ ಜೀವನ ನಡೆಸುತ್ತಿದ್ದಾರೆ. ೨೦೦೪ರಿಂದ ಜಾರಿಗೆ ತಂದ ಎನ್ಪಿಎಸ್ ಯೋಜನೆಯಿಂದಾಗಿ ಸಂಧ್ಯಾ ಕಾಲದಲ್ಲಿ ಶಿಕ್ಷಕರ ಕುಟುಂಬ ಸಂಕಷ್ಟದ ಜೀವನ ನಡೆಸಬೇಕಾಗಿದೆ. ಇಂದು ಶಿಕ್ಷಕರನ್ನಾಳುತ್ತಿರುವ ಜನಪ್ರತಿನಿಧಿಗಳಿಗೆ ಯಾವುದೇ ಸಾಮಾನ್ಯ ಕಾನೂನಿನ ಮತ್ತು ಯೋಜನೆಗಳ ಅರಿವು ಇಲ್ಲದಿರುವುದರಿಂದ ಸಾಕಷ್ಟು ಸಮಸ್ಯೆ ಜೀವಂತವಾಗಿ ಉಳಿಯುವಂತಾಗಿದೆ ಎಂದು ವಿಷಾದಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು, ಜಿಲ್ಲಾ ಪ್ರಶಸ್ತಿಗೆ ಭಾಜನರಾದ ಶಿಕ್ಷಕರು ಹಾಗೂ ಸಾಧಕÀ ಶಿಕ್ಷಕರನ್ನು ಸನ್ಮಾನಿಸಲಾಯಿತು. ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಆಯೋಜಿಸಿದ್ದ ವಿವಿಧ ಕ್ರೀಡಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಸ್ಎಸ್ಎಲ್ಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಅಧ್ಯಕ್ಷತೆಯನ್ನು ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿ.ಎಸ್. ಗೀತಾ ವಹಿಸಿದ್ದರು. ವೇದಿಕೆಯಲ್ಲಿ ಕೂಡಿಗೆ ಡಯಟ್ ಉಪನಿರ್ದೇಶಕ ಎಂ. ಚಂದ್ರಕಾAತ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ. ಸೋಮಶೇಖರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಕೆ. ಕುಮಾರ್, ಕೊಡಗು ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸದಾಶಿವಯ್ಯ ಎಸ್. ಪಲ್ಲೇದ್, ವೃತ್ತಿ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಎ.ಪಿ. ಸೋಮಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ತಾಲೂಕು ಘಟಕದ ಅಧ್ಯಕ್ಷ ಬಸವರಾಜು ಮತ್ತಿತರರು ಇದ್ದರು.