ಸೋಮವಾರಪೇಟೆ, ಅ. ೪: ಯಾವುದೇ ಸಮುದಾಯ ಅಥವಾ ಸಮಾಜ ಅಭಿವೃದ್ಧಿಯಾಗಬೇಕಾದರೆ ಸಂಘಟನೆಯ ಮೂಲಕ ಮಾತ್ರ ಸಾಧ್ಯ ಎಂದು ಹಿಂದೂ ಮಲಯಾಳ ಸಮಾಜದ ಜಿಲ್ಲಾ ಅಧ್ಯಕ್ಷರಾದ ವಿ.ಎಂ. ವಿಜಯ ಅಭಿಪ್ರಾಯಿಸಿದರು.
ಸೋಮವಾರಪೇಟೆ ತಾಲೂಕು ಹಿಂದೂ ಮಲಯಾಳ ಸಮಾಜದ ವತಿಯಿಂದ ಒಕ್ಕಲಿಗರ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಓಣಂ ಉತ್ಸವದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮಲಯಾಳ ಸಮಾಜದ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ಮಾನವೀಯ ನೆಲೆಗಟ್ಟಿನಲ್ಲಿ ಜಾತಿ, ಮತ, ಧರ್ಮದ ಭೇದವಿಲ್ಲದೆ ಸಹಾಯ ಮಾಡಲಾಗಿದೆ. ಸಮಾಜದಲ್ಲಿ ತೀರಾ ಕಡುಬಡತನ ದಲ್ಲಿರುವ ಸಮಾಜದ ಮಕ್ಕಳಿಗೆ ಶೈಕ್ಷಣಿಕ ವಾಗಿ ಸಹಾಯ ಮಾಡುವು ದರೊಂದಿಗೆ ಆರ್ಥಿಕವಾಗಿ ಸಹಕಾರ ನೀಡಲಾಗಿದೆ. ಈ ನಿಟ್ಟಿನಲ್ಲಿ ಇನ್ನು ಮುಂದೆಯೂ ಸಮುದಾಯದ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದರು.
ಕಾರ್ಯಕ್ರಮದಲ್ಲಿ ಎಸ್.ಎನ್. ಡಿ.ಪಿ ತಾಲೂಕು ಘಟಕದ ಅಧ್ಯಕ್ಷ ಟಿ.ಆರ್. ವಾಸುದೇವ್, ಓಣಂ ಉತ್ಸವ ಸಮಿತಿ ಅಧ್ಯಕ್ಷ ಪಿ.ಡಿ. ಪ್ರಕಾಶ್, ಸಂಘದ ಸಲಹೆಗಾರರು, ಕಾರ್ಯಕಾರಿ ಮಂಡಳಿಯ ಎಲ್ಲಾ ಪ್ರಮುಖರು ಇದ್ದರು. ಮಲಯಾಳಂ ಚಿತ್ರನಟ ರಂಜಿತ್ ಚಾಲಾಕುಡಿ ಅವರಿಂದ ನಾಡಂಪಾಟ್ ಕಾರ್ಯಕ್ರಮ, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ನೃತ್ಯ ಸ್ಫರ್ಧೆ ನಡೆಯಿತು. ಸಾಧಕರಿಗೆ ಸನ್ಮಾನ ಮಾಡಲಾಯಿತು. ಪೂಕಳಂ ಸ್ಪರ್ಧೆ, ನೃತ್ಯ ಸ್ಪರ್ಧೆಯಲ್ಲಿ ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿದರು.