ಗೋಣಿಕೊಪ್ಪಲು, ಅ. ೭: ಗ್ರಾಮದ ಅಭಿವೃದ್ಧಿಗೆ ಕಂಕಣ ಬದ್ಧನಾಗಿ ಕೆಲಸ ನಿರ್ವಹಿಸುತ್ತೇನೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದರು.

ಬಿ. ಶೆಟ್ಟಿಗೇರಿ ವಲಯ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಚುನಾವಣೆ ಸಂದರ್ಭ ಇಲ್ಲಿನ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಪಾರವಾದ ವಿಶ್ವಾಸವನ್ನು ನೀಡಿದ್ದರು. ಹಾಗಾಗಿ ಒಂದು ಬಾರಿ ಮಾತ್ರ ಭೇಟಿ ನೀಡಿದ್ದೆ, ನಿರೀಕ್ಷಿತ ಮಟ್ಟದಲ್ಲಿ ಮತಗಳನ್ನು ಈ ಭಾಗದಿಂದ ಬಂದಿದೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ. ಗ್ರಾಮದ ಹಲವು ಸಮಸ್ಯೆಗಳನ್ನು ಆಲಿಸಿದ್ದೇನೆ. ಇದನ್ನು ಹಂತಹAತವಾಗಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಈಗಾಗಲೇ ಹಲವು ಕೆಲಸಗಳಿಗೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಕಾಮಗಾರಿಗಳು ಸದ್ಯದಲ್ಲಿಯೇ ಆರಂಭವಾಗಲಿದೆ ಎಂದರು.

ಕಾAಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಉಮೇಶ್ ಕೇಚಮಯ್ಯ ಪ್ರಾಸ್ತವಿಕವಾಗಿ ಮಾತನಾಡಿ, ಕಳೆದ ೨ ದಶಕಗಳಿಂದ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲದೆ ಕಾರ್ಯಕರ್ತರಲ್ಲಿ ಹಾಗೂ ಮುಖಂಡರಲ್ಲಿ ನೋವಿನ ವಾತಾವರಣವಿತ್ತು. ಇದೀಗ ಶಾಸಕರು ಆಯ್ಕೆಯಾದ ನಂತರ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ. ಕಾರ್ಯಕರ್ತರ ನಿರಂತರ ಶ್ರಮದಿಂದ ಪಕ್ಷ ಬೇರುಮಟ್ಟದಲ್ಲಿ ತಳವೂರುತ್ತಿದೆ. ಮುಂದಿನ ಚುನಾವಣೆಯಲ್ಲಿಯೂ ಕೂಡ ಪಕ್ಷ ಸಂಘಟನೆ ಮತ್ತಷ್ಟು ಬಲಿಷ್ಠಗೊಳ್ಳಬೇಕು ಎಂದರು.

ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲಿರ ಬೋಪಣ್ಣ ಮಾತನಾಡಿ, ಚುನಾವಣೆ ಸಂದರ್ಭ ವಿವಿಧ ಕೊಡವ ಭಾಷಿಕ ಜನಾಂಗವು ಪಕ್ಷದೊಂದಿಗೆ ಸಂಪೂರ್ಣವಾಗಿ ತೊಡಗಿಸಿಕೊಂಡು ಶಾಸಕರನ್ನು ಆಯ್ಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಭಾಷಿಕ ಜನಾಂಗವನ್ನು ಶಾಸಕ ಪೊನ್ನಣ್ಣ ಅವರು ಒಟ್ಟಾಗಿ ಕರೆದೊಯ್ಯಬೇಕು. ಈ ಭಾಗದ ಗಿರಿಜನರು ಸದಾ ಪಕ್ಷಕ್ಕೆ ಸಹಕಾರ ನೀಡುತ್ತಲೇ ಬಂದಿದ್ದಾರೆ. ಇವರ ಕುಡಿಯುವ ನೀರು, ಮನೆ ನಿರ್ಮಾಣ ಸೇರಿದಂತೆ ಇತರ ಮೂಲ ಸೌಕರ್ಯಗಳಿಗೆ ಒತ್ತು ನೀಡಬೇಕು. ಈ ಭಾಗದ ಸಾಕಷ್ಟು ರಸ್ತೆಗಳು, ವಿದ್ಯುತ್ ಕಂಬಗಳು ದುಸ್ಥಿತಿಯಲ್ಲಿದ್ದು ಇವುಗಳನ್ನು ಸರಿಪಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಕೊಲ್ಲೀರ ಬೋಪಣ್ಣ ಅವರನ್ನು ಗ್ರಾಮಸ್ಥರ ಪರವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿದರು. ಬಿ.ಶೆಟ್ಟಿಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ತೀತಿಮಾಡ ಸದನ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಬಿ. ಶೆಟ್ಟಿಗೇರಿ, ಕೊಂಗಣ, ಭಾಗದ ಸಮಸ್ಯೆಗಳನ್ನು ಲಿಖಿತವಾಗಿ ಶಾಸಕರ ಗಮನಕ್ಕೆ ತಂದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಡಿಸಿಸಿ ಮಾಜಿ ಅಧ್ಯಕ್ಷ ಪೆಮ್ಮಂಡ ಪೊನ್ನಪ್ಪ, ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಕಡೇಮಾಡ ಕುಸುಮ ಜೋಯಪ್ಪ, ಸೇರಿದಂತೆ ಇನ್ನಿತರ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಕ್ಷದ ಪ್ರಮುಖರಾದ ಮೂಕಳೇರ ಕುಶಾಲಪ್ಪ, ಚೇರಂಡ ಮೋಹನ್ ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ದರು.