ಸೋಮವಾರಪೇಟೆ, ಅ. ೧೧: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಶಾಂತಳ್ಳಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸಮೀಪದ ತೋಳೂರುಶೆಟ್ಟಳ್ಳಿಯ ಹರಪಳ್ಳಿ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ದಿ. ಎಂ.ಜಿ. ಪದ್ಮನಾಭ ಕಾಮತ್ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಡಾ. ಅಂಬೇಡ್ಕರ್ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಗಳಿಗೆ ದುಡಿದ ಉದ್ಯಮಿಗಳ ಕುರಿತು ವಸತಿ ಶಾಲೆಯ ಉಪನ್ಯಾಸಕಿ ಬಿ.ಎಂ. ಭವ್ಯ ಉಪನ್ಯಾಸ ಮಂಡಿಸಿದರು.
ತಾಲೂಕು ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಜೆ.ಸಿ. ಶೇಖರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ. ಮಂಜೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹೋಬಳಿ ಪರಿಷತ್ ಅಧ್ಯಕ್ಷ ಸಿ. ಎಸ್. ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.
ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿ ಮಂಜುನಾಥ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ್, ಕಾರ್ಯದರ್ಶಿ ಎ.ಪಿ. ವೀರರಾಜ್, ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜಲಾ ಹೂವಯ್ಯ ಉಪಸ್ಥಿತರಿದ್ದರು.
ಈ ಸಂದರ್ಭ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಅಧ್ಯಕ್ಷ ವಿಜೇತ್ ಸೇರಿದಂತೆ ಶಾಲಾ ಶಿಕ್ಷಕರುಗಳನ್ನು ಸನ್ಮಾನಿಸಲಾಯಿತು. ಪರಿಷತ್ ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ಕಾರ್ಯಕ್ರಮ ನಿರ್ವಹಿಸಿದರು.