ಸಿದ್ದಾಪುರ, ಅ. ೧೨: ನಿಲುಗಡೆ ಮಾಡಿದ್ದ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಹಾನಿ ಗೊಳಿಸಿದ ಘಟನೆ ಬಾಡಗ ಬಾಣಂಗಾಲ ಗ್ರಾಮದ ಮಠ ಎಂಬಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಪ್ರಶಾಂತ್ ಎಂಬವರ ಕಾರನ್ನು ಅವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಸಂದರ್ಭ ತಾ. ೧೧ರ ರಾತ್ರಿ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಗಾಜು ಪುಡಿಗಟ್ಟಿ ಹಾನಿಗೊಳಿಸಿದೆ.
ಸ್ಥಳಕ್ಕೆ ಉಪ ವಲಯ ಅರಣ್ಯ ಅಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿಗಳಾದ ಗುರು ಮತ್ತು ಇನ್ನಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಭಾಗದಲ್ಲಿ ಕಾಡಾನೆಗಳು ಕಾಫಿ ತೋಟದಲ್ಲಿ ಬೀಡುಬಿಟ್ಟು ದಾಂಧಲೆ ನಡೆಸಿ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿವೆ. ಉಪಟಳ ನೀಡುತ್ತಿರುವ ಸಲಗವನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು ಕೂಡ ಫಲಪ್ರದವಾಗಿಲ್ಲ. ಕೂಡಲೇ ಆನೆ ಸೆರೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.