ಸೋಮವಾರಪೇಟೆ, ಅ. ೨೦: ತಾ. ೨೮ ರಂದು ನಡೆಸಲಾಗುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಬಗ್ಗೆ ತಹಶೀಲ್ದಾರ್ ಎಸ್.ಎನ್. ನರಗುಂದ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ಬಾರಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ಅದ್ಧೂರಿಯಿಂದ ವಾಲ್ಮೀಕಿ ಜಯಂತಿ ಆಚರಣೆಗೆ ಸಭೆ ತೀರ್ಮಾನಿಸಿತು. ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು, ಮುಖಂಡರನ್ನು ಆಹ್ವಾನಿಸಿ ಕಾರ್ಯಕ್ರಮ ನಡೆಸಬೇಕು. ಎರಡೂ ತಾಲೂಕಿನವರು ಸಹಕಾರ ನೀಡಬೇಕೆಂದು ತಹಶೀಲ್ದಾರ್ ಎಸ್.ಎನ್. ನರಗುಂದ ಮನವಿ ಮಾಡಿದರು. ಸಭೆಯಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಅಶೋಕ, ತಾಲೂಕು ಘಟಕದ ಅಧ್ಯಕ್ಷ ಶಿವಾನಂದಪ್ಪ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.