ಮಡಿಕೇರಿ, ಅ. ೩೧: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಜಾತ್ಯತೀತ ಜನತಾದಳ (ಜೆಡಿಎಸ್) ಚುನಾವಣಾ ಪೂರ್ವದಲ್ಲೇ ಎನ್.ಡಿ.ಎ. ಬಳಗಕ್ಕೆ ಸೇರಿಕೊಂಡಿದ್ದು, ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಮಲ-ದಳ ಮೈತ್ರಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಬಿಜೆಪಿಯನ್ನು ಎದುರಿಸಿದ್ದರು. ಆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಕೇವಲ ಎರಡು ಸ್ಥಾನಕ್ಕೆ ಮಾತ್ರ ಸೀಮಿತಗೊಂಡಿದ್ದರು.
ಕಾAಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದವು. ಇದೀಗ ಕಾಂಗ್ರೆಸ್ ಅಭ್ಯರ್ಥಿಗಳು ಜೆಡಿಎಸ್-ಬಿಜೆಪಿ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಎದುರಿಸಬೇಕಾಗಿದೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ದಳ-ಕಮಲ ಮೈತ್ರಿ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹ ಸ್ಪರ್ಧಿಸುವುದು ಬಹುತೇಕ ಖಚಿತ.
ಅಧಿಕೃತವಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಘೋಷಣೆ ಮಾಡುವುದಕ್ಕಿಂತ ಮೊದಲೇ ಮೈಸೂರಿನಲ್ಲಿ ಪ್ರತಾಪ್ ಸಿಂಹ, ಜೆಡಿಎಸ್ ರಾಷ್ಟಿçÃಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದು, ಮೂಲತಃ ಹಾಸನ ಜಿಲ್ಲೆಯವರಾದ ಪ್ರತಾಪ್ ಸಿಂಹ ಒಕ್ಕಲಿಗ ಗೌಡ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಕಳೆದ ಬಾರಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಯಾಗಿದ್ದರೂ ಕೂಡ ಜೆಡಿಎಸ್ ಶಾಸಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ನಿರೀಕ್ಷೆಗೂ ಮೀರಿ ಮತ ಪಡೆದಿದ್ದರು. ಜೆಡಿಎಸ್ ಪಕ್ಷವು ಹಾಸನ, ಕೋಲಾರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದ್ದು, ಕೊಡಗು-ಮೈಸೂರು ಕ್ಷೇತ್ರದಲ್ಲಿ ಬಿಜೆಪಿಗೆ ಬಿಟ್ಟುಕೊಡುವುದು ಖಚಿತವಾಗಿದೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಎಂಟು ಕ್ಷೇತ್ರಗಳಲ್ಲಿ ಜೆಡಿಎಸ್ ಎರಡು ಶಾಸಕರನ್ನು ಹೊಂದಿದೆ.
ಮೈಸೂರು ಜಿಲ್ಲೆಯಲ್ಲಿ ಬಿಜೆಪಿಗಿಂತ ಜೆಡಿಎಸ್ ಪ್ರಬಲವಾಗಿದ್ದು, ಕಮಲ-ದಳ ಮೈತ್ರಿಯಿಂದ ಪ್ರತಾಪ್ ಸಿಂಹ ಹಾದಿ ಸುಗಮವಾಗಲಿದೆ ಎಂಬುದು ರಾಜಕೀಯ ವಿಶ್ಲೇಷಕರ ಮಾತು.
ಕಾಂಗ್ರೆಸ್ ಆಸೆಗೆ ಮೈತ್ರಿ ಬ್ರೇಕ್?
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಗ್ ಫೈಟ್ ನೀಡಿ ಕ್ಷೇತ್ರವನ್ನು ಮರಳಿ ಪಡೆಯುವ ಲೆಕ್ಕಾಚಾರದಲ್ಲಿದ್ದ ಕಾಂಗ್ರೆಸ್ ಪಕ್ಷದ ಆಸೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಿನ್ನಡೆ ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಕೊಡಗಿನ ಮಡಿಕೇರಿ ಹಾಗೂ ವೀರಾಜಪೇಟೆ, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ನರಸಿಂಹರಾಜ, ಚಾಮರಾಜ ಹಾಗೂ ಕೃಷ್ಣರಾಜ ಕ್ಷೇತ್ರಗಳು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತವೆ. ೨೦೧೮ ವಿಧಾನಸಭಾ ಚುನಾವಣೆಯಲ್ಲಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ನಾಲ್ಕು ವಿಧಾನಸಭಾ ಕ್ಷೇತ್ರಗಳು ಬಿಜೆಪಿ ವಶದಲ್ಲಿದ್ದವು.
ಜೆಡಿಎಸ್ ಮೂರು ಹಾಗೂ ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಪಡೆದಿತ್ತು.
ಕೊಡಗಿನ ಮಡಿಕೇರಿ ಹಾಗೂ ವೀರಾಜಪೇಟೆ, ಮೈಸೂರು ಜಿಲ್ಲೆಯ ಚಾಮರಾಜ ಹಾಗೂ ಕೃಷ್ಣರಾಜ ಕ್ಷೇತ್ರಗಳಲ್ಲಿ ೨೦೧೮ ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪಡೆದಿತ್ತು. ಪಿರಿಯಾಪಟ್ಟಣ, ಹುಣಸೂರು ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿತ್ತು.
ನರಸಿಂಹರಾಜ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಹುಣಸೂರು ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್, ಕ್ಷೇತ್ರವನ್ನು ತನ್ನ ತೆಕ್ಕೆಗೆ ಮರಳಿ ಪಡೆದಿತ್ತು. ಈ ಹಿಂದಿನ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರದ ಪೈಕಿ ನಾಲ್ಕರಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದುದು ದೊಡ್ಡ ಲಾಭವಾಗಿತ್ತು.
೨೦೧೯ ರಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಯಾಗಿ ಸ್ಪರ್ಧಿಸಿದ್ದರೂ ಕೂಡ ಪ್ರತಾಪ್ ಸಿಂಹ ಅವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿAದ ಗೆಲುವು ಸಾಧಿಸಿದ್ದರು.
ಮತ್ತೊಮ್ಮೆ ಮೋದಿ ಹೆಸರಿನಲ್ಲಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಬಹುದೆಂಬ ಪ್ರತಾಪ್ ಸಿಂಹ ಅವರ ಕನಸಿಗೆ ಈ ಬಾರಿಯ ಜೆಡಿಎಸ್-ಬಿಜೆಪಿ ಮೈತ್ರಿ ಮತ್ತಷ್ಟು ಶಕ್ತಿ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳನ್ನು ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪಡೆದುಕೊಂಡಿದ್ದಾರೆ. ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಅದಲ್ಲದೇ ಮೈಸೂರು ಜಿಲ್ಲೆಯಲ್ಲಿ ತಮ್ಮ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಕೃಷ್ಣರಾಜ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ಅವರನ್ನು ೧,೩೮,೬೪೭ ಮತಗಳ ಅಂತರದಿAದ ಸೋಲಿಸಿದ್ದರು.
ಮೋದಿ ಹವಾದಲ್ಲಿ ಎರಡನೇ ಬಾರಿ ಗೆಲುವು ಪಡೆದು ಲೋಕಸಭೆ ಪ್ರವೇಶಿಸಿದ್ದರು. ಪ್ರತಾಪ್ ಸಿಂಹ ತಮ್ಮ ಮೊದಲ ಚುನಾವಣೆಯಲ್ಲಿ ಮಾಜಿ ಸಂಸದ ಅಡಗೂರು ಹೆಚ್. ವಿಶ್ವನಾಥ್ ವಿರುದ್ಧ ೩೧,೬೦೮ ಮತಗಳ ಅಂತರದಿAದ ಗೆಲುವು ಪಡೆದಿದ್ದರು.
೨೦೧೯ ರಲ್ಲಿ ಮೈಸೂರು ಭಾಗದಲ್ಲಿ ಪ್ರಬಲವಾಗಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಮತಗಳ ಕ್ರೋಢೀಕರಣಗೊಂಡು ಪ್ರತಾಪ್ ಸಿಂಹ ಅವರು ಸೋಲುತ್ತಾರೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ ಮೈತ್ರಿ ಅಭ್ಯರ್ಥಿಯನ್ನು ದೊಡ್ಡ ಅಂತರದಲ್ಲಿ ಮಣಿಸಿದ್ದರು.
ಬಿಜೆಪಿ ಕೈ ಹಿಡಿದಿದ್ದ ಮೈಸೂರು ಜಿಲ್ಲೆಯ ಕ್ಷೇತ್ರಗಳು
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಕ್ಷೇತ್ರಗಳು ಪ್ರತಾಪ್ ಸಿಂಹ ಅವರ ಕೈ ಹಿಡಿದಿದ್ದವು. ಜೆಡಿಎಸ್ ಹಾಗೂ ಕಾಂಗ್ರೆಸ್ ಪ್ರಬಲವಾಗಿರುವ ಮೈಸೂರು ಜಿಲ್ಲೆಯ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ಅವರು ದೊಡ್ಡ ಅಂತರದಿAದ ಮುನ್ನಡೆ ಪಡೆಯುತ್ತಾರೆ ಎಂದು ಅಂದಾಜಿಸಲಾಗಿತ್ತು.
ಆದರೆ ಮೈತ್ರಿ ಅಭ್ಯರ್ಥಿ ಕೇವಲ ನರಸಿಂಹರಾಜ ಕ್ಷೇತ್ರದಲ್ಲಿ ಮಾತ್ರ ದೊಡ್ಡ ಪ್ರಮಾಣದ ಮತಗಳ ಅಂತರದಿAದ ಮುನ್ನಡೆ ಪಡೆದಿದ್ದರು.
ಹುಣಸೂರು ಹಾಗೂ ಪಿರಿಯಾಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಅವರು ಕೇವಲ ಹತ್ತು ಸಾವಿರ ಮತಗಳ ಅಂತರವನ್ನು ಮಾತ್ರ ಪಡೆದಿದ್ದರು. ಸಂಸದ ಪ್ರತಾಪ್ ಸಿಂಹ ಅವರು ಚಾಮುಂಡೇಶ್ವರಿ, ಕೃಷ್ಣರಾಜ ಹಾಗೂ ಚಾಮರಾಜ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಿಂತ ದೊಡ್ಡ ಪ್ರಮಾಣದ ಮತಗಳನ್ನು ಗಳಿಸಿದ್ದರು.
ಕೊಡಗಿನಿಂದ ಒಂದು ಲಕ್ಷಕ್ಕೂ ಅಧಿಕ ಮತ
ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ ಗೆಲುವು ಸಾಧಿಸಲು ಕೊಡಗು ಜಿಲ್ಲೆಯ ಮತದಾರರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರೆ ತಪ್ಪಾಗಲಾರದು.
ಜಿಲ್ಲೆಯ ಎರಡು ಕ್ಷೇತ್ರದ ಮತದಾರರು ದೊಡ್ಡ ಸಂಖ್ಯೆಯಲ್ಲಿ ಪ್ರತಾಪ್ ಸಿಂಹ ಅವರ ಪರವಾಗಿ ಮತ ಚಲಾಯಿಸಿದ್ದರು. ಆದರೆ ಕಳೆದ ಎರಡು ಚುನಾವಣೆಯಲ್ಲಿ ಕೊಡಗಿನ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಇದ್ದರು. ಆದರೆ ಈ ಬಾರಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಿದ್ದಾರೆ.
೨೦೧೯ ರಲ್ಲಿ ಮಡಿಕೇರಿ ಕ್ಷೇತ್ರದಿಂದ ಒಟ್ಟು ಚಲಾವಣೆಯಾಗಿದ್ದ ೧,೬೯,೨೪೩ ಮತಗಳಲ್ಲಿ ೧,೦೨,೧೬೧ ಮತಗಳನ್ನು ಪಡೆದಿದ್ದರು. ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ೫೮,೧೮೫ ಮತಗಳನ್ನು ಪಡೆದಿದ್ದರು.
ಮಡಿಕೇರಿ ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹ ಅವರು ೪೩,೯೭೬ ಮತಗಳ ಅಂತರದಿAದ ಮುನ್ನಡೆ ಪಡೆದಿದ್ದರು. ವೀರಾಜಪೇಟೆ ಕ್ಷೇತ್ರದಲ್ಲಿ ಒಟ್ಟು ಚಲಾವಣೆಯಾದ ೧,೫೯,೨೮೭ ಮತಗಳಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ೯೬,೨೩೫ ಮತಗಳನ್ನು ಪಡೆದಿದ್ದರು.
ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ೫೪,೭೩೮ ಮತಗಳನ್ನು ಪಡೆದಿದ್ದರು. ೩೮,೪೯೭ ಮತಗಳ ಅಂತರದಿAದ ವೀರಾಜಪೇಟೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಮುನ್ನಡೆ ಪಡೆದಿದ್ದರು. ಕಳೆದ ಎರಡು ಬಾರಿಯೂ ಕೂಡ ಪ್ರತಾಪ್ ಸಿಂಹ ಅವರಿಗೆ ಅತ್ಯಧಿಕ ಮತಗಳನ್ನು ನೀಡಿ ಗೆಲ್ಲಿಸಿದ ಕೊಡಗಿಗೆ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂಬ ಆರೋಪಗಳು ಜಿಲ್ಲೆಯ ಜನರ ಮಧ್ಯೆ ಇದೆ.
ಕೊಡಗು ಜಿಲ್ಲೆಯ ಸಮಸ್ಯೆಗಳಿಗೆ ಪ್ರತಾಪ್ ಸಿಂಹ ಅವರು ಸ್ಪಂದಿಸಿಲ್ಲ ಹಾಗೂ ಬಿಜೆಪಿ ಕಾರ್ಯಕರ್ತರು, ಮುಖಂಡರೊAದಿಗೆ ಸಂಬAಧವೂ ಅಷ್ಟಕಷ್ಟೇ.
ಜಿಲ್ಲೆಯ ಮುಖಂಡರ ನಡುವೆ, ಪ್ರತಾಪ್ ಸಿಂಹ ವಿರುದ್ಧ ಅಸಮಾಧಾನ ಇದೆ ಎಂಬ ಆರೋಪಗಳು ಕೂಡ ಅಲ್ಲಲ್ಲಿ ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕಳೆದ ಎರಡು ಚುನಾವಣೆಯಲ್ಲಿ ಸುಲಭ ರೀತಿಯಲ್ಲಿ ಗೆಲುವು ಪಡೆದ ಪ್ರತಾಪ್ ಸಿಂಹ ಅವರಿಗೆ ಮುಂದಿನ ಚುನಾವಣೆಯಲ್ಲಿ ಗೆಲುವು ಪಡೆಯುವುದು ಹಿಂದಿನಷ್ಟು ಸುಲಭವಲ್ಲ ಎಂದು ಹೇಳಲಾಗುತ್ತಿದೆ.
- ಕೆ.ಎಂ ಇಸ್ಮಾಯಿಲ್ ಕಂಡಕರೆ