ಮುಳ್ಳೂರು, ನ. ೧೦: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಧಾರ್ಮಿಕ ತಳಹದಿಯ ಜೊತೆಯಲ್ಲಿ ಗ್ರಾಮೀಣ ಭಾಗದ ಮಹಿಳೆಯರ ಸಬಲೀಕರಣ ಹಾಗೂ ಗ್ರಾಮೀಣ ಭಾಗದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದಲ್ಲಿ ಜನಮನ್ನಣೆಗಳಿಸಿದೆ ಎಂದು ಅಂಕನಹಳ್ಳಿ ತಪೋವನ ಕ್ಷೇತ್ರ ಮನೆಹಳ್ಳಿ ಮಠಾಧೀಶ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.

ಅವರು ಕೊಡಗು-ಹಾಸನ ಜಿಲ್ಲಾ ಗಡಿಭಾಗದಲ್ಲಿರುವ ಈಚಲಬೀಡು ಗ್ರಾಮದ ಶಾಲಾ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ, ಈಚಲಬೀಡು ಪ್ರಗತಿಬಂಧು ಸ್ವ-ಸಹಾಯ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ಆಶೀರ್ವಚಿಸಿ ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಗ್ರಾಮೀಣ ಭಾಗದ ಮಹಿಳೆಯರನ್ನು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದಲ್ಲಿ ಸಬಲರಾಗಿಸುವ ಚಿಂತನೆಯಲ್ಲಿ ಸ್ಥಾಪಿತವಾದ ಸಂಸ್ಥೆಯು ಈಗ ಗ್ರಾಮಾಭಿವೃದ್ಧಿ, ಕೃಷಿ, ಆರೋಗ್ಯ, ಪರಿಸರ, ಸ್ವಚ್ಛತೆ ಇನ್ನು ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ದೇಶದ ಏಕೈಕ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಮೈಸೂರು ನಿರ್ದೇಶಕ ಬಿ.ಜಯರಾಮ್ ನೆಲ್ಲಿತ್ತಾಯ ಮಾತನಾಡಿ, ಗ್ರಾಮಾಭಿವೃದ್ಧಿ ಸಂಸ್ಥೆ ರಾಜ್ಯ, ದೇಶಾದ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಯೋಜನೆಯು ಹಲವಾರು ಕಾರ್ಯಕ್ರಮಗಳು, ಸಾಲ ಸೌಲಭ್ಯಗಳನ್ನು ಕೊಡುತ್ತಿರುವ ಮೂಲಕ ಗ್ರಾಮೀಣ ಭಾಗದ ಜನರಿಗೆ ನೆರವಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಈಚಲಬೀಡು ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಈ.ಎ.ಮೋಹನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಮುಖರಾದ ಎಂ.ನಾಗೇಶ್, ದೊಡ್ಡೇಗೌಡ, ಮಮತ, ಯೋಜನಾಧಿಕಾರಿ ಕೆ.ಪುರುಷೋತ್ತಮ್, ಆರ್.ಪಿ.ಲಕ್ಷö್ಮಣ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸೇವಾ ಪ್ರತಿನಿಧಿಗಳು, ಪೂಜಾ ಸಮಿತಿ ಸದಸ್ಯರು ಹಾಜರಿದ್ದರು.