ನಾಪೋಕ್ಲು, ನ. ೧೫: ಗ್ರಾಮ ಅಭಿವೃದ್ಧಿ ಯೋಜನೆಯ ಮೂಲಕ ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀಡಿದ ಅನುದಾನದಲ್ಲಿ ಚೆರಿಯ ಪರಂಬು ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಸಮೀಪದ ಚೆರಿಯಪರಂಬು - ಕಲ್ಲು ಮೊಟ್ಟೆ ಸಂಪರ್ಕ ರಸ್ತೆಗೆ ೧೦ ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಕಾಮಗಾರಿಗೆ ಚೆರಿಯಪರಂಬುವಿನಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಸ್ಥಳೀಯ ನಾಯಕರು ಚೆರಿಯಪರಂಬು ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಒಂದು ವಾರದಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಆಗಲಿದೆ ಎಂದರು. ಮಳೆಗಾಲದಲ್ಲಿ ಚೆರಿಯಪರಂಬು ಜಲಾವೃತವಾಗುವುದನ್ನು ತಡೆಗಟ್ಟಲು ಸೂಕ್ತ ಕಾಮಗಾರಿ ಕೈಗೊಳ್ಳಲಾಗುವುದು. ಸಣ್ಣ ನೀರಾವರಿ ಇಲಾಖೆ ಸಚಿವರು ಹಾಗೂ ಉಸ್ತುವಾರಿ ಸಚಿವರು ಈ ಮೊದಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿ ಕಾಮ ಗಾರಿಗಳನ್ನು ಶೀಘ್ರ ಕೈಗೆತ್ತಿಕೊಳ್ಳಲಾಗುವುದು ಎಂದರು.

ಈ ಸಂದರ್ಭ ಶಾಸಕರೊಂದಿಗೆ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್, ಗ್ರಾಮ ಪಂಚಾಯಿತಿ ಸದಸ್ಯರಾದ ಕುಲ್ಲೇಟಿರ ಅರುಣ ಬೇಬ, ಸಾಬಾ ತಿಮಯ್ಯ, ಮಹಮ್ಮದ್ ಖುರೇಸಿ, ಮಹಮ್ಮದ್ ಟಿ.ಎ. ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಹಾಗೂ ಬಿದ್ದಾಟಂಡ ಎಸ್. ತಮ್ಮಯ್ಯ ಇತರರು ಹಾಜರಿದ್ದರು.