ಸೋಮವಾರಪೇಟೆ, ನ. ೧೭: ಕ್ರೀಡಾ ಜಿಲ್ಲೆಯಾದ ಕೊಡಗಿನಲ್ಲಿ ಪ್ರತಿಭಾವಂತ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ಸೂಕ್ತ ಪ್ರೋತ್ಸಾಹ ಮತ್ತು ಅವಕಾಶ ದೊರಕಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ ಹೇಳಿದರು.

ತಾಲೂಕಿನ ಮಾದಾಪುರ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೋರ್ವ ವಿದ್ಯಾರ್ಥಿಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮುಂದೆ ಇರುತ್ತಾರೆ. ಆದರೆ ಅವರಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆ ಎಂಬುದನ್ನು ಪೋಷಕರು ಮತ್ತು ಶಿಕ್ಷಕರು ಗುರುತಿಸಿ ಪ್ರೋತ್ಸಾಹ ನೀಡಬೇಕೆಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಪಾಲ್ಗೊಳ್ಳುವುದು ಮುಖ್ಯ. ಕ್ರೀಡಾಪಟುಗಳು ಸಮಯ ಪರಿಪಾಲನೆ, ನಿರ್ದಿಷ್ಟ ಗುರಿ ಮತ್ತು ಏಕಾಗ್ರತೆಯನ್ನು ಬೆಳೆಸಿಕೊಂಡರೆ ಮಾತ್ರ ಉತ್ತಮ ಕ್ರೀಡಾಪಟುಗಳಾಗಲು ಸಾಧ್ಯ ಎಂದರು.

ವಿದ್ಯಾಸAಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಕರ್ನಲ್ ಬಿ.ಜಿ.ವಿ. ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪ್ರಾಂಶುಪಾಲ ಸಿ.ಜಿ. ಮಂದಪ್ಪ, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದೇವಕಿ, ಪದವಿಪೂರ್ವ ಕಾಲೇಜು ಉಪನಿರ್ದೇಶಕ ಪುಟ್ಟರಾಜು, ಆಡಳಿತ ಮಂಡಳಿ ಸದಸ್ಯರಾದ ಬೋಜಮ್ಮ, ನಾಣಿಯಪ್ಪ, ಮತ್ತಿತರರು ಉಪಸ್ಥಿತರಿದ್ದರು.