ಸೋಮವಾರಪೇಟೆ, ನ. ೧೭: ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಬೆಟ್ಟದಳ್ಳಿ ಸಿದ್ದಾರ್ಥ ನಗರದ ಮಾನವತಾ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ತಾ. ೨೦ ರ ಸೋಮವಾರ ತಾಲೂಕಿನ ಶಾಂತಳ್ಳಿ ಹೋಬಳಿಯ ಕುಮಾರಲಿಂಗೇಶ್ವರ ಪ್ರೌಢಶಾಲಾ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಕುರಿತು ಗುರುವಾರ ಇಲ್ಲಿನ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಮಾತನಾಡಿ, ಅಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ತಾಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ಕೆ.ಆರ್. ಚಂದ್ರಿಕಾ ಪಾಲ್ಗೊಳ್ಳಲಿದ್ದಾರೆ. ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮಾನವತಾ ಯುವಕ ಸಂಘದ ಅಧ್ಯಕ್ಷರಾದ ಬಿ.ಸಿ. ಆದರ್ಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೆಶಕರಾದ ವಿ.ಟಿ.ವಿಸ್ಮಯಿ ಪಾಲ್ಗೊಳ್ಳಲಿದ್ದಾರೆ.

ಯುವಜನೋತ್ಸವ ಕಾರ್ಯಕ್ರಮ ದಲ್ಲಿ ಭಾಗವಹಿಸುವವರ ವಯೋಮಿತಿ ಖಡ್ಡಾಯವಾಗಿ ೧೫ ರಿಂದ ೨೯ ವರ್ಷ ದೊಳಗಿರಬೇಕು. ಕೊಡಗು ಜಿಲ್ಲೆಯ ಯುವಕ - ಯುವತಿ ಮಂಡಳಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರಿಗೆ ಪ್ರಯಾಣ ಭತ್ಯೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಗೋಷ್ಠಿಯಲ್ಲಿ ಯುವ ಒಕ್ಕೂಟದ ಪದಾಧಿಕಾರಿಗಳಾದ ಹೆಚ್.ಕೆ. ಮಹೇಶ್, ಹೆಚ್.ಪಿ.ವಿಜಯ ಕುಮಾರ್, ಬಿ.ಸಿ.ಆದರ್ಶ್, ಎ.ಆರ್.ಕುಶಾಲಪ್ಪ ಮತ್ತಿತರರು ಇದ್ದರು.