ಸೋಮವಾರಪೇಟೆ, ನ. ೨೫: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಇಓ ಮಂಜೇಶ್ ಅವರು, ಪ್ರತಿಭಾವಂತ ಶಿಕ್ಷಕರ ಪ್ರತಿಭಾ ಪ್ರದರ್ಶನಕ್ಕೆ ಇಂತಹ ಕಾರ್ಯಕ್ರಮ ಗಳನ್ನು ಸದುಪಯೋಗಪಡಿಸಿ ಕೊಳ್ಳಬೇಕು ಎಂದು ಹೇಳಿದರು.
ಪ್ರಾಥಮಿಕ ಶಾಲಾ ಸಹಶಿಕ್ಷಕರ ಸಂಘದ ವಿಭಾಗೀಯ ಉಪಾಧ್ಯಕ್ಷ ಶಿವಕುಮಾರ್ ಮಾತನಾಡಿ, ಒತ್ತಡದಲ್ಲಿ ಕೆಲಸ ಮಾಡುವ ಶಿಕ್ಷಕರು ಇಂತಹ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು. ಪ್ರಸಕ್ತ ಶಿಕ್ಷಕರುಗಳನ್ನು ಬೇರೆ ಕಾರ್ಯಗಳಿಗೆ ನಿಯೋಜಿಸುತ್ತಿರುವುದರಿಂದ ಅನೇಕ ಶಿಕ್ಷಕರಿಗೆ ಮಕ್ಕಳಿಗೆ ಪಾಠ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಮಾತನಾಡಿ, ತಾಲೂಕಿನ ಪ್ರಾಥಮಿಕ ಶಾಲೆಯಲ್ಲಿ ೪೩೦ ಶಿಕ್ಷಕರಿದ್ದಾರೆ. ಆದರೆ ೧೭ ಮಂದಿ ಶಿಕ್ಷಕರು ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳು ಯಶಸ್ವಿ ಯಾಗಬೇಕಾದರೆ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರತ್ನ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಸಂಘದ ರಾಜ್ಯ ಉಪಾಧ್ಯಕ್ಷ ಯೋಗೇಶ್, ಪದಾಧಿಕಾರಿಗಳಾದ ಎಲ್.ಎಂ. ಪ್ರೇಮ, ದಯಾನಂದ ಪ್ರಭು, ದೈಹಿಕ ಶಿಕ್ಷಣ ಅಧೀಕ್ಷಕಿ ಸುಕುಮಾರಿ ಇದ್ದರು.
ಜನಪದಗೀತೆ, ಆಶುಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪಾಠೋಪಕರಣಗಳ ತಯಾರಿಸುವ ಸ್ಪರ್ಧೆ, ಚಿತ್ರ ಬರೆಯುವ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮದಲ್ಲಿ ಶಿಕ್ಷಕರು ಭಾಗವಹಿಸಿದ್ದರು.