ಮಡಿಕೇರಿ, ನ. ೨೪: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯು ಸರ್ಕಾರಿ ಪದವಿಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಸಭಾಂಗಣದಲ್ಲಿ ಬುಧವಾರ ನಡೆಯಿತು.
ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅವರು ಉದ್ಘಾಟಿಸಿ ಮಾತನಾಡಿ, ಪ್ರಜಾ ಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಆ ನಿಟ್ಟಿನಲ್ಲಿ ಸಂವಿಧಾನದ ಆಶಯದಂತೆ ಆಡಳಿತ ಮತ್ತು ವಿರೋಧ ಪಕ್ಷಗಳು ಕಾರ್ಯ ನಿರ್ವಹಿಸಬೇಕು ಎಂದರು.
ಅಧಿವೇಶನದ ಜವಾಬ್ದಾರಿ ಸಭಾಧ್ಯಕ್ಷರ ಮೇಲಿರುತ್ತದೆ. ಅಧಿವೇಶನದಲ್ಲಿ ಆರೋಪ ಪ್ರತ್ಯಾ ರೋಪಗಳು ಕೇಳಿಬರುತ್ತವೆ. ಒಟ್ಟಾರೆ ಸಮಾಜಮುಖಿಯಾಗಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಉತ್ತಮ ಸಂಸದೀಯ ಪಟುಗಳಾಗಿ ಯುವ ಪೀಳಿಗೆ ಮುಂದೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎ.ಪಿ. ಧನಂಜಯ್ ಅವರು ಮಾತನಾಡಿ, ದೇಶ ಕಟ್ಟುವ ನಿಟ್ಟಿನಲ್ಲಿ ಯುವ ಪೀಳಿಗೆಗಾಗಿ ಇಂತಹ ಪ್ರಯತ್ನ ಶ್ಲಾಘನೀಯ. ಸರ್ಕಾರದ ಪಾತ್ರ, ಕಾನೂನಿನ ಅರಿವು ಮೂಡಿಸುವ ಇಂತಹ ಕಾರ್ಯಕ್ರಮ ಗಳು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ ಎಂದರು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ. ಪುಟ್ಟರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸುವುದು ಬಹಳ ಮುಖ್ಯ ವಾಗಿದೆ ಎಂದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಪ್ರಸನ್ನ, ಉಪನ್ಯಾಸಕ ಚಿದಾನಂದ್ ಮತ್ತಿತರರು ಇದ್ದರು.