ಸೋಮವಾರಪೇಟೆ, ನ. ೨೪: ತಾಲೂಕು ಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ತುಳುನಾಡ ಬಿಲ್ಲವ ಮಹಿಳಾ ಸಂಘದ ವತಿಯಿಂದ ತಾ. ೨೬ ರಂದು ಸ್ಥಳೀಯ ಸಂಕಪ್ಪ ಹಾಲ್‌ನಲ್ಲಿ ಶ್ರೀ ನಾರಾಯಣ ಗುರುಗಳ ಸ್ಮರಣೆ ಹಾಗೂ ಸಂಘದ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ಎ. ಭಾಸ್ಕರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. ೨೬ ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಶಾಸಕ ಡಾ. ಮಂಥರ್ ಗೌಡ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಮಂಗಳೂರು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಖಜಾಂಚಿ ಆರ್.ಪದ್ಮರಾಜ್ ಭಾಗಿಯಾಗಲಿದ್ದು, ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ಸಮಿತಿಯ ಗೌರವಾಧ್ಯಕ್ಷ ಲಕ್ಷö್ಮಣ ಪೂಜಾರಿ, ಹಿಂದೂ ಮಲಯಾಳ ಸಮಾಜದ ಜಿಲ್ಲಾಧ್ಯಕ್ಷ ವಿ.ಎಂ. ವಿಜಯ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಹೊಸಬೀಡು ಗ್ರಾಮದ ಉಮೇಶ್ ಅವರ ಪುತ್ರ, ಬಾಲಪ್ರತಿಭೆ ಅರುಶ್ ಉಮೇಶ್ ಅವರನ್ನು ಸನ್ಮಾನಿಸಲಾಗುವುದು. ಇದರೊಂದಿಗೆ ಕಳೆದ ೨೦೧೯-೨೦, ೨೦-೨೧, ೨೧-೨೨ ಹಾಗೂ ೨೨-೨೩ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ., ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. ೮೫ಕ್ಕೂ ಅಧಿಕ ಅಂಕಗಳನ್ನು ಗಳಿಸಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ದೃಢೀಕೃತ ಅಂಕಪಟ್ಟಿಯನ್ನು ಸಂಘದ ಕಾರ್ಯಾಲಯಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ: ೯೯೭೨೭೧೭೪೫೦, ೯೦೦೮೫೬೫೪೫೮ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.

ಅಂದು ಅಪರಾಹ್ನ ೨ ಗಂಟೆಗೆ ಸಂಘದ ವಾರ್ಷಿಕ ಮಹಾಸಭೆ ಅದೇ ಸಭಾಂಗಣದಲ್ಲಿ ಅಧ್ಯಕ್ಷ ಬಿ.ಎ. ಭಾಸ್ಕರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಇಂದಿರಾ ಮೋಣಪ್ಪ, ಖಜಾಂಚಿ ಎಂ.ಜಿ. ರಮೇಶ್, ನಿರ್ದೇಶಕರಾದ ಬಿ.ಬಿ. ಗಂಗಾಧರ್, ಜಿ. ಗಣೇಶ್ ಅವರುಗಳು ಉಪಸ್ಥಿತರಿದ್ದರು.