ಸೋಮವಾರಪೇಟೆ, ನ. ೨೮: ದಾಸ ಶ್ರೇಷ್ಠ ಕನಕದಾಸರ ೫೧೪ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ತಹಶೀಲ್ದಾರ್ ಎಸ್.ಎನ್. ನರಗುಂದ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು. ಈ ಬಾರಿ ಸೋಮವಾರಪೇಟೆ ಮತ್ತು ಕುಶಾಲನಗರ ಎರಡೂ ತಾಲೂಕಿನವರು ಒಟ್ಟಾಗಿ ಸೇರಿ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ತಾ. ೩೦ ರಂದು ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ತೀರ್ಮಾನಿಸಲಾಯಿತು.
ಸಂಗೊಳ್ಳಿ ರಾಯಣ್ಣ ಕುರುಬ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪ್ರಭಾಕರ್ ಮಾತನಾಡಿ, ಈ ಬಾರಿ ಕಾರ್ಯಕ್ರಮದಲ್ಲಿ ೧೫ ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲು ಸಭೆಯಲ್ಲಿ ತಿಳಿಸಿದರು. ಕಾರ್ಯಕ್ರಮದಲ್ಲಿ ಆಶ್ರಮ ಶಾಲಾ ವಿದ್ಯಾರ್ಥಿಗಳು, ಐಟಿಡಿಪಿ ಇಲಾಖೆ ಮತ್ತು ಸುತ್ತಲಿನ ಶಾಲಾ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಕಾರ್ಯಕ್ರಮ ಆಯೋಜಿಸಲು ಸಲಹೆ ನೀಡಿದರು.
ಅಂದು ಸರ್ಕಾರಿ ರಜೆ ಇರುವುದರಿಂದ ಎಲ್ಲ ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಬೇಕೆಂದು ಜಿಲ್ಲಾ ಸಮಿತಿ ಉಪಾಧ್ಯಕ್ಷ ಚಿನ್ನಯ್ಯ ಅವರು ತಹಶೀಲ್ದಾರರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಸಂಗೊಳ್ಳಿ ರಾಯಣ್ಣ ಕುರುಬ ಹಿತರಕ್ಷಣಾ ವೇದಿಕೆ ಸಂಘಟನಾ ಕಾರ್ಯದರ್ಶಿ ಭರಮಣ್ಣ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಪೂರ್ವಭಾವಿ ಸಭೆಗೆ ಕೆಲವು ಇಲಾಖಾಧಿಕಾರಿಗಳನ್ನು ಹೊರತುಪಡಿಸಿದಂತೆ ಹೆಚ್ಚಿನ ಇಲಾಖೆಯಿಂದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಗೈರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ದೂರು ನೀಡುವಂತೆ ಸಭೆ ನಿರ್ಣಯಿಸಿತು.