ಮಡಿಕೇರಿ, ನ. ೨೯: ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಅಪ್ಪಣ್ಣ ಅಧ್ಯಕ್ಷತೆ ಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮತ್ತು ಗ್ರಂಥಾಲಯ ಮೇಲ್ವಿಚಾರಕರ ಸಭೆಯನ್ನು ನಡೆಸಲಾಯಿತು.

ಈ ಸಭೆಯಲ್ಲಿ ೨೪ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಮೇಲ್ವಿಚಾರಕರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ತರಬೇತಿಯನ್ನೂ ನೀಡಲಾಯಿತು.

ತರಬೇತಿಯಲ್ಲಿ ಪ್ರಮುಖವಾಗಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮವು ಗ್ರಾಮೀಣ ಪ್ರದೇಶದಲ್ಲಿ ಯುವಜನರು ಮತ್ತು ಸಮುದಾಯದವರು ತಂತ್ರಜ್ಞಾನ ಕೌಶಲ್ಯ ಮತ್ತು ಶೈಕ್ಷಣಿಕ ವಿಷಯಗಳು ಮತ್ತು ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಳ್ಳುವಲ್ಲಿ ಸಹಕಾರವನ್ನು ನೀಡುವ ಉದ್ದೇಶವನ್ನು ಹೊಂದಿದೆ ಎಂದು ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ರಕ್ಷಿತ್ ಮಾಹಿತಿಯನ್ನು ನೀಡಿದರು.

ಕಾರ್ಯನಿರ್ವಹಣಾಧಿಕಾರಿ ತರಬೇತಿಯ ಸಮಯದಲ್ಲಿ ಗ್ರಂಥಾಲಯಗಳ ಅಭಿವೃದ್ಧಿಗೆ ಅಗತ್ಯವಾದ ಸಹಕಾರವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನೀಡುವುದರ ಜೊತೆಗೆ ಸಮುದಾಯಕ್ಕೆ ಅಗತ್ಯವಾದ ಸಂಪನ್ಮೂಲವನ್ನು ಕೊಡಿಸಬೇಕೆಂದು ಜೊತೆಗೆ ಎಲ್ಲಾ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ವಿದ್ಯುತ್ ಮತ್ತು ಅಂತರ್ಜಾಲ ಸಂಪರ್ಕದ ವ್ಯವಸ್ಥೆಯನ್ನು ಪರಿಶೀಲಿಸಿ ಕಲ್ಪಿಸಿಕೊಡುವುದರ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಶೈಕ್ಷಣಿಕ ಸಾಲಿನಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾದ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ೧೨ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಲ್ಯಾಪ್‌ಟಾಪ್, ಸ್ಮಾರ್ಟ್ಫೋನ್ ಹಾಗೂ ಮಾನಿಟರ್ ಅನ್ನು ವಿತರಿಸಲಾಯಿತು.

ಈ ಸಂದರ್ಭ ತಾಲೂಕು ಪಂಚಾಯಿತಿಯ ರವಿ ತಿಮ್ಮಯ್ಯ, ಸ್ವರೂಪ, ಪೊನ್ನಂಪೇಟೆ ತಾಲೂಕಿನ ಸಂಯೋಜಕಿ ಶ್ರುತಿ, ವೀರಾಜಪೇಟೆ ತಾಲೂಕಿನ ಸಂಯೋಜಕಿ ಚೈತ್ರ ಹಾಗೂ ೨೪ ಗ್ರಂಥಾಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.