ಮಡಿಕೇರಿ, ಡಿ. ೧೫: ವಿದ್ಯಾರ್ಥಿಗಳಲ್ಲಿ ಧೈರ್ಯ, ಆತ್ಮವಿಶ್ವಾಸ ಮೂಡಿಸುವುದಲ್ಲದೆ, ಶಾಲೆಗಳಿಗೆ ಗೈರು ಹಾಜರಿ, ತಡವಾಗಿ ಆಗಮಿಸುವುದನ್ನು ತಪ್ಪಿಸುವ ಉದ್ದೇಶದಿಂದ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ೨೦೦೬-೦೭ ರಲ್ಲಿ ೮ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ಯೋಜನೆಯನ್ನು ಜಾರಿಗೆ ತಂದಿತ್ತು.
ಆರAಭದಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣುಮಕ್ಕಳಿಗೆ ಮಾತ್ರ ಉಚಿತ ಬೈಸಿಕಲ್ ಯೋಜನೆ ಜಾರಿಯಲ್ಲಿತ್ತು. ತದನಂತರ ಈ ಯೋಜನೆಯನ್ನು ಸರ್ಕಾರಿ ಹಾಗೂ ಅನುದಾನಿತ ಪ್ರೌಢ ಶಾಲೆಗಳ ೮ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲರಿಗೂ ವಿಸ್ತರಿಸಲಾಗಿತ್ತು. ಆದರೆ ಐದು ವರ್ಷಗಳಿಂದ ೮ನೇ ತರಗತಿ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆಯಾಗಿಲ್ಲ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ೮ನೇ ತರಗತಿ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ ಕುರಿತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಸದನದಲ್ಲಿ ಪ್ರಸ್ತಾಪಿಸಿದ್ದಾರೆ.
ಮುಂಬರಲಿರುವ ಆರ್ಥಿಕ ವರ್ಷದಿಂದ ರಾಜ್ಯದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಆರಂಭಿಸಲಾಗುವುದೆAದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ಇತ್ತಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆಡಳಿತದಲ್ಲಿದ್ದಾಗ, ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಿತ್ತು. ನಮ್ಮ ಸರ್ಕಾರ ಇದೀಗ ಅಧಿಕಾರಕ್ಕೆ ಬಂದಿದ್ದು, ಮತ್ತೆ ಬೈಸಿಕಲ್ ವಿತರಣೆಯನ್ನು ಆರಂಭಿಸುವ ಪ್ರಯತ್ನ ಮಾಡುತ್ತಿದೆ ಎಂದು ಮಧು ಬಂಗಾರಪ್ಪ ಉತ್ತರಿಸಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಅತೀ ಹೆಚ್ಚು ಹಣವನ್ನು ವ್ಯಯಿಸುತ್ತಿರುವುದರಿಂದ ಎಂಟನೇ ತರಗತಿ ವಿದ್ಯಾರ್ಥಿಗಳ ಉಚಿತ ಬೈಸಿಕಲ್ ಈ ವರ್ಷ ಜಾರಿ ಮಾಡಲು ಅಸಾಧ್ಯವಾಗಿದೆ.
ಒಟ್ಟು ೫ ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಚಿತ ಬೈಸಿಕಲ್ ನೀಡದೇ ಇರುವುದರಿಂದ ಸರ್ಕಾರಿ ಹಾಗೂ ಅನುದಾನಿತ ಪ್ರೌಢ ಶಾಲೆಗಳ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡಿರುವ ೧೯,೭೫೫ ವಿದ್ಯಾರ್ಥಿಗಳಿಗೆ ಸೈಕಲ್ ಭಾಗ್ಯ ಇಲ್ಲದಂತಾಗಿದೆ. ೨೦೨೩-೨೪ನೇ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಮೂರು ತಾಲೂಕಿನ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ೮ನೇ ತರಗತಿ ವಿದ್ಯಾರ್ಥಿಗಳ ಸಂಖ್ಯೆ ೩,೬೧೬ ಇದ್ದು, ೪೭ ಸರ್ಕಾರಿ ಪ್ರೌಢಶಾಲೆ, ೪೬ ಅನುದಾನಿತ ಹಾಗೂ ೮೨ ಅನುದಾನ ರಹಿತ ಪ್ರೌಢಶಾಲೆಗಳಿವೆ.
೩ ಕಿಲೋಮೀಟರ್ ದೂರದಲ್ಲಿರುವ ಶಾಲೆಗಳು
ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶವಾಗಿದೆ. ಬಹುತೇಕ ವಿದ್ಯಾರ್ಥಿ ಗಳು ಮೂರ್ನಾಲ್ಕು ಕಿಲೋಮೀಟರ್ ನಡೆದು ಶಾಲೆ ಸೇರುತ್ತಿರುವ ದೃಶ್ಯ ಜಿಲ್ಲೆಯಲ್ಲಿ ಸಾಮಾನ್ಯವಾಗಿದೆ. ಉಚಿತ ಬೈಸಿಕಲ್ ವಿತರಣೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುತ್ತಿತ್ತು.
ನಗರ ಪ್ರದೇಶಗಳ ವಿದ್ಯಾರ್ಥಿಗಳು ಬಸ್ ಹಾಗೂ ಬಾಡಿಗೆ ವಾಹನದ ಮೂಲಕ ಶಾಲೆಗೆ ತೆರಳುತ್ತಾರೆ. ಆದರೆ ಬೆಟ್ಟ, ಗುಡ್ಡ, ತೋಟದ ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಜಿಲ್ಲೆಯ ಬಹುತೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲೇ ಶಾಲೆ ಸೇರುತ್ತಿದ್ದಾರೆ.
ಸೈಕಲ್ ಸಿಕ್ಕಿದ್ದರೆ ಮನೆಯಿಂದ ತಡವಾಗಿ ಹೊರಡ ಬಹುದಾಗಿದೆ.
- ಕೆ.ಎಂ ಇಸ್ಮಾಯಿಲ್ ಕಂಡಕರೆ