ಮಡಿಕೇರಿ, ಡಿ. ೧೫: ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವು ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ಪವಿತ್ರ ಗ್ರಂಥವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೆಚ್.ಸಿ. ಶಾಮ್ ಪ್ರಸಾದ್ ಅವರು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಹಕಾರದಲ್ಲಿ ವಿಶೇಷ ಘಟಕ ಯೋಜನೆಯಡಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ ಓದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತ ಸಂವಿಧಾನವು ವಿಶ್ವದಲ್ಲಿ ಶ್ರೇಷ್ಠ ಸಂವಿಧಾನವಾಗಿದ್ದು, ಮಾದರಿಯಾಗಿದೆ. ಸಂವಿಧಾನದ ಪ್ರಸ್ತಾವನೆಯಲ್ಲಿ ವಿವರಿಸಲಾಗಿರುವ ಅಂಶಗಳು ಸಾರ್ವಕಾಲಿಕ ದಾಖಲೆ ಯಾಗಿದೆ ಎಂದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಓದು ವ್ಯಾಪ್ತಿ ಸಮುದ್ರದಷ್ಟು ವಿಶಾಲವಾದದ್ದು ಹಾಗೂ ಆಳವಾದದ್ದು, ಅಂಬೇಡ್ಕರ್ ಅವರ ಜ್ಞಾನ ಅದ್ಭುತ.

ಅಂಬೇಡ್ಕರ್ ಅವರು ಸಾಮಾಜಿಕ ಮತ್ತು ಆರ್ಥಿಕ ತಜ್ಞರಾಗಿ, ಪ್ರಬುದ್ಧ ರಾಜಕಾರಣಿಯಾಗಿ... ಹೀಗೆ ಹಲವು ವಿಚಾರಗಳ ಬಗ್ಗೆ ಅಧ್ಯಯನ ಮಾಡಬಹುದಾಗಿದೆ. ಅಂಬೇಡ್ಕರ್ ಅವರು ಬೆಳೆದು ಬಂದ ದಾರಿ, ಅವರು ಭಾರತೀಯ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ.

ಡಾ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕಾನೂನು ವ್ಯಾಪ್ತಿಯಲ್ಲಿ ನಾವೆಲ್ಲರೂ ಒಳಗೊಂಡಿದ್ದೇವೆ. ಎಲ್ಲರಿಗೂ ಸಂವಿಧಾನ ಬದ್ಧವಾದ ಹಕ್ಕುಗಳನ್ನು ನೀಡಲು ಶ್ರಮಿಸಿದ್ದಾರೆ. ಆ ನಿಟ್ಟಿನಲ್ಲಿ ಮಹಾನಾಯಕ ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಬೇಕಿದೆ ಎಂದರು. ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಲ್ಲ, ಶಕ್ತಿ. ಅಸಮಾನತೆಯನ್ನು ಹೋಗಲಾಡಿಸಲು ಮೂಡಿ ಬಂದ ಅಲೆ ಎಂದರೆ ತಪ್ಪಾಗಲಾರದು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಂ.ಎ. ನಿರಂಜನ್ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ಕಾನೂನು ಸಚಿವರಾಗಿ ಹಿಂದೂ ಕೋಡ್ ಬಿಲ್ ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ನೀಡಿದ್ದಾರೆ. ಇದರ ಪ್ರತಿಫಲವಾಗಿ ಪುರುಷ ಮತ್ತು ಮಹಿಳೆಯರು ಸಮಾನವಾಗಿ ಬದುಕಲು ಸಾಧ್ಯವಾಗಿದೆ.

ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಹೇಗೆ ಕಾನೂನುಗಳನ್ನು ತರಬೇಕು ಎಂಬ ಬಗ್ಗೆ ಸಂವಿಧಾನದಲ್ಲಿ ಅಂಬೇಡ್ಕರ್ ಅವರು ವಿವರಿಸಿದ್ದಾರೆ. ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು ಹಾಗೆಯೇ ರಾಜ್ಯ ನಿರ್ದೇಶಕ ತತ್ವಗಳು ಹೀಗೆ ಹಲವು ಅಂಶಗಳನ್ನು ವಿವರಿಸುವ ಮೂಲಕ ಭಾರತಕ್ಕೆ ಮಾದರಿಯಾದ ಸಂವಿಧಾನವನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದಾರೆ ಎಂದರು. ಮದೆನಾಡು ಮದೆ ಮಹೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ಮಾತನಾಡಿ, ಅಂಬೇಡ್ಕರ್ ಅವರು ಜ್ಞಾನ ಮತ್ತು ಸಾಮಾಜಿಕ ನ್ಯಾಯದ ಸಂಕೇತ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬದುಕಿನ ೬೫ ವರ್ಷಗಳ ಅವಧಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಕಲ್ಪಿಸುವ ಮೂಲಕ ಅದ್ಭುತ ಸಾಧನೆ ಮಾಡಿದ್ದಾರೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬುದು ಅಂಬೇಡ್ಕರ್ ಅವರ ಧ್ಯೇಯೋದ್ದೇಶವಾಗಿದೆ.

೬೪ ಪದವಿಗಳನ್ನು ಪಡೆಯುವ ಮೂಲಕ ವಿಶ್ವದ ಜ್ಞಾನಿಯಾಗಿದ್ದಾರೆ. ಸಮಾನತೆ, ಭ್ರಾತೃತ್ವ, ಸಹೋದರತೆಯನ್ನು ಅಂಬೇಡ್ಕರ್ ಅವರು ಎತ್ತಿ ಹಿಡಿದಿದ್ದಾರೆ ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಭಾರತ ಸಂವಿಧಾನದ ಪೀಠಿಕೆ ಓದಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ್ ಮಾತನಾಡಿ, ಪ್ರತಿಯೊಬ್ಬರೂ ಜೀವನದಲ್ಲಿ ಸಂದೇಶವಾಗಬೇಕು. ಅಂಬೇಡ್ಕರ್ ಅವರಂತೆ ಹೆಚ್ಚಿನ ಅಧ್ಯಯನ ಮಾಡಬೇಕು ಎಂದು ಹೇಳಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಇತರರು ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು, ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಆಡಳಿತ ಸಹಾಯಕ ಜಯಪ್ಪ ನಿರೂಪಿಸಿ, ವಂದಿಸಿದರು.