ಹೆಬ್ಬಾಲೆ, ಡಿ. ೧೫: ಉತ್ತರ ಕೊಡಗಿನ ಹೆಬ್ಬಾಲೆ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಹಬ್ಬ ಹಾಗೂ ಜಾತ್ರೋತ್ಸವವು ವಿಜೃಂಭಣೆಯಿAದ ನಡೆಯಿತು.

ಗಣಪತಿ ಪೂಜೆ, ಪುಣ್ಯಾಹ ರಕ್ಷಾಬಂಧನ, ಧ್ವಜಾರೋಹಣ, ನವಗ್ರಹ ಸ್ಥಾಪನೆ, ನವಗ್ರಹ ಪೂಜೆ ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ದೇವಾಲಯದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನೇತೃತ್ವದಲ್ಲಿ ನೆರವೇರಿತು.

ದೇವಿಯ ವಾರ್ಷಿಕ ಹಬ್ಬದ ಅಂಗವಾಗಿ ಪವಿತ್ರ ಬನದಲ್ಲಿ ಬನಶಂಕರಿ ದೇವಸ್ಥಾನದಲ್ಲಿ ಬೆಳಿಗ್ಗೆ ಕಲಶ ಸ್ಥಾಪಿಸುವುದರೊಂದಿಗೆ ವಿವಿಧ ಪೂಜಾ ಕೈಂಕರ್ಯಗಳು ದೇವಸ್ಥಾನ ಸಮಿತಿ ಅಧ್ಯಕ್ಷ ಯಜಮಾನ್ ಹೆಚ್.ಎನ್. ಬಸವರಾಜು ಹಾಗೂ ಕಾರ್ಯದರ್ಶಿ ಹೆಚ್.ಪಿ. ರಾಜು ಹಾಗೂ ಸಮಿತಿ ಸದಸ್ಯರ ನೇತೃತ್ವದಲ್ಲಿ ನಡೆದವು.

ಜಾತ್ರೆಯ ಅಂಗವಾಗಿ ದೇವಸ್ಥಾನ ಸಮಿತಿ ವತಿಯಿಂದ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿಯಿಂದ ರಾತ್ರಿ ವಿದ್ಯುತ್ ಅಲಂಕೃತ ಮಂಟಪದಲ್ಲಿ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ಪವಿತ್ರ ಬನಕ್ಕೆ ಕೊಂಡೊಯ್ಯಲಾಯಿತು.

೯ ದಿನ ಉಪವಾಸ ವ್ರತ ಆಚರಿಸಿದ ಹರಕೆ ಹೊತ್ತ ಭಕ್ತಾದಿಗಳು ಮೆರವಣಿಗೆಯಲ್ಲಿ ಬಂದು ದೇವಸ್ಥಾನದ ಮುಂದೆ ಹಾಕಿರುವ ಅಗ್ನಿಕುಂಡವನ್ನು ಹಾಯ್ದು ದೇವಿಯ ದರ್ಶನ ಪಡೆದರು. ಗ್ರಾಮದ ಇತರೆ ಭಾಗಗಳಿಂದ ಬಂದ ಉತ್ಸವ ಮಂಟಪಗಳ ಶೋಭಾಯಾತ್ರೆಯು ಹಬ್ಬಕ್ಕೆ ಮೆರಗು ನೀಡಿತು. ಮೆರವಣಿಗೆ ಸಂದರ್ಭ ಗ್ರಾಮದ ಬಸ್ ನಿಲ್ದಾಣದ ಬಳಿ ಸಿಡಿಮದ್ದುಗಳ ಪ್ರದರ್ಶನ ನಡೆಯಿತು.