ಮಡಿಕೇರಿ, ಡಿ. ೨೧: ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆ ಅಭಿವ್ಯಕ್ತ ಪಡಿಸಲು ಸೂಕ್ತ ವೇದಿಕೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಕಾAತ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸಂತ ಮೈಕಲರ ಶಾಲೆಯಲ್ಲಿ ಗುರುವಾರ ನಡೆದ ಕೊಡಗು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳ ಆಸಕ್ತಿ ಅಭಿರುಚಿ ಗುರುತಿಸಿ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ರೂಪಿಸಲು ಉತ್ತಮ ವೇದಿಕೆಯಾಗಿದೆ ಎಂದರು.
ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಿ.ಟಿ. ಸೋಮಶೇಖರ್ ಮಾತನಾಡಿ, ಎಲೆ ಮರೆಯ ಕಾಯಿಯಂತೆ ಗೂಡಿನಲ್ಲಿ ಇರುವವರಿಗೆ ಪ್ರತಿಭೆ ಹೊರತರಲು ಇದು ಸೂಕ್ತ ವೇದಿಕೆಯಾಗಿದೆ ಎಂದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಎಸ್.ಎ.ಯೋಗೇಶ್ ಮಾತನಾಡಿ, ಕ್ರೀಡೆ ದೈಹಿಕ ಆರೋಗ್ಯ ನೀಡುತ್ತದೆ. ಹಾಗೆಯೇ ನೃತ್ಯ ಸಂಗೀತ ಮಾನಸಿಕ ಆರೋಗ್ಯ ನೀಡುತ್ತದೆ ಎಂದು ತಿಳಿಸಿದರು.
ಜಿಲ್ಲಾ ಉಪ ಯೋಜನಾ ಸಂಯೋಜಕರಾದ ಸೌಮ್ಯ ಪೊನ್ನಪ್ಪ ಮಾತನಾಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವಲ್ಲಿ ಪೋಷಕರ ಪಾತ್ರ ಹಾಗೂ ಶಿಕ್ಷಕರ ಪಾತ್ರ ಮಹತ್ತರದಾಗಿದೆ ಎಂದರು.
ಜನಪದ ಗೀತೆ, ನೃತ್ಯ, ಸಂಗೀತ, ಭರತನಾಟ್ಯ, ಕೋಲಾಟ, ರಂಗೋಲಿ ಸ್ಪರ್ಧೆ, ಛದ್ಮವೇಷ, ಛಾಯಾಚಿತ್ರ ಮತ್ತಿತರ ಸ್ಪರ್ಧೆಗಳು ಜರುಗಿದವು. ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರು.
ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸದಾಶಿವ ಪಲ್ಲೇದ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಪೆರಾಜೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಕಿರಣ್ ಪಿಎಂ, ವಿಜ್ಞಾನ ಪರಿಷತ್ತಿನ ಅಧ್ಯಕ್ಷರಾದ ಟಿ.ಜಿ. ಪ್ರೇಮ್ಕುಮಾರ್ ಮತ್ತಿತರರು ಇದ್ದರು.