ನಾಪೋಕ್ಲು, ಡಿ. ೨೬: ಸಮೀಪದ ಕೊಳಕೇರಿ ಗ್ರಾಮದ ಚಪ್ಪೆಂಡಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಿ.ಕೆ. ತಿಮ್ಮಯ್ಯ ರಾಜ್ಯಮಟ್ಟದ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ರಾಜ್ಯಮಟ್ಟದ ಮಹಾ ಸಮ್ಮೇಳನ ಮತ್ತು ರಾಜ್ಯ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಇವರು ಈ ಪ್ರಶಸ್ತಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಸ್ವೀಕರಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ ೨ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರು ಸಲ್ಲಿಸಿದ ಶ್ಲಾಘನೀಯ ಸೇವೆಗಾಗಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಹಿಂದೆ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೂ ಇವರು ಭಾಜನರಾಗಿದ್ದರು.