ಚೆಯ್ಯಂಡಾಣೆ, ಜ. ೩: ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆರಿಯಪರಂಬು ಕಲ್ಲುಮೊಟ್ಟೆ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯಿಂದ ರೂ. ೧೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ನನ್ನ ಅವಧಿಯಲ್ಲಿ ಕಳಪೆ ಕಾಮಗಾರಿಗೆ ಅವಕಾಶ ನೀಡುವುದಿಲ್ಲ. ಯಾವುದೇ ರಸ್ತೆ ಕಾಮಗಾರಿ ಗುಣಮಟ್ಟ ಇಲ್ಲದಿದ್ದರೆ ಸ್ಥಳೀಯ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಇಂಜಿನಿಯರ್ಗಳ ಗಮನಕ್ಕೆ ತರಬೇಕು. ಗ್ರಾಮಸ್ಥರಿಗೂ ಕಾಮಗಾರಿಯ ಪರಿಶೀಲನೆ ನಡೆಸುವ ಅಧಿಕಾರ ಇದೆ. ಕಳಪೆ ಕಾಮಗಾರಿ ಸಾಬೀತಾದಲ್ಲಿ ಹಣ ಬಿಡುಗಡೆ ಮಾಡುವುದಿಲ್ಲ ಎಂದು ಎಚ್ಚರಿಸಿದರು.
ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ವಲಯಾಧ್ಯಕ್ಷ ಕುಸು ಕುಶಾಲಪ್ಪ, ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಹೇಮಾವತಿ, ಸದಸ್ಯ ಸಾಬಾ ತಿಮ್ಮಯ್ಯ ಸೇರಿದಂತೆ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.