ಕೂಡಿಗೆ, ಜ. ೭: ಆರೋಗ್ಯದ ಬಗ್ಗೆ ಕಾಳಜಿ ಹಾಗೂ ದೈಹಿಕ ಚಟುವಟಿಕೆಗಳೊಂದಿಗೆ ಶಿಸ್ತಿನ ನಡವಳಿಕೆಯಿಂದ ಸಮಾಜದಲ್ಲಿ ವಿಶಿಷ್ಟವಾದ ಸ್ಥಾನವನ್ನು ಪಡೆಯಬಹುದು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಸೀನಪ್ಪ ಅಭಿಪ್ರಾಯಿಸಿದರು.
ಜ್ಞಾನಕಾವೇರಿ ಆವರಣ ಚಿಕ್ಕಅಳುವಾರ ಇಲ್ಲಿನ ಮಾನವಿಕ ಸಂಕೀರ್ಣದ ಕಾವೇರಿ ಸಭಾಂಗಣದಲ್ಲಿ ಕೊಡಗು ವಿಶ್ವವಿದ್ಯಾಲಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರಂಗಾಲ ಇವರ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಆಯುಷ್ಮಾನ್ ಕಾರ್ಡ್ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಆರೋಗ್ಯಕ್ಕೆ ಸಂಬAಧಪಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ವೈದ್ಯರ ಸೂಕ್ತ ಮಾರ್ಗದರ್ಶನದ ಜೊತೆಗೆ ಸರಿಯಾದ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡು ಕಟ್ಟುನಿಟ್ಟಿನ ವ್ಯಾಯಾಮ ಹಾಗೂ ನಿರಂತರ ವೇಗ ನಡಿಗೆಯನ್ನು ಅಳವಡಿಸಿಕೊಂಡರೆ ಉತ್ತಮ ಆರೋಗ್ಯದ ಜೀವನ ನಮ್ಮದಾಗುತ್ತದೆ ಎಂದರು.
ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.೫ ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯ. ಎಪಿಎಲ್ ಕಾರ್ಡುದಾರರು ಅಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ೩೦% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.೧.೫೦ ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಸಂಸ್ಥೆಯ ಬೋಧಕ ಮತ್ತು ಬೋಧಕೇತರ ವೃಂದದವರು, ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆ ಮಾಡಿಸಿ ಕೊಂಡರು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳಾದ ಸೌರಬ್, ಬಿಂದು, ಆರೋಗ್ಯ ಮಿತ್ರ ಅಧಿಕಾರಿ ಪ್ರತಿಭಾ, ಜಿಲ್ಲಾ ಆಸ್ಪತ್ರೆ ತಾಂತ್ರಿಕ ಸಂಯೋಜಕರಾದ ರಾಜೀವ್ ಭಾಗವಹಿಸಿದ್ದರು.