ಪ್ರತಾಪ್ ಸಿಂಹ ಮಾಹಿತಿ
ಮಡಿಕೇರಿ, ಜ. ೮: ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ೨೦೨೨-೨೩ನೇ ಸಾಲಿನಲ್ಲಿ ರೂ. ೧೦ ಕೋಟಿ ಅನುದಾನ ಮಂಜೂರಾಗಿದ್ದು, ಈ ಪೈಕಿ ರೂ. ೪ ಕೋಟಿ ವೆಚ್ಚದಲ್ಲಿ ಕೊಡವ ಸಮಾಜಗಳ ಅಭಿವೃದ್ಧಿಗೆ ಸರಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಅನುಮೋದನೆ ಕುರಿತು ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶವನ್ನು ಉಲ್ಲೇಖಿಸಿ ಮಾಧ್ಯಮ ಪ್ರಕಟಣೆ ನೀಡಿರುವ ಸಂಸದ ಪ್ರತಾಪ್ ಸಿಂಹ, ರೂ.೬ ಕೋಟಿ ಅನುದಾನ ಕೊಡವ ಸಾಂಸ್ಕೃತಿಕ ಭವನ/ಮ್ಯೂಸಿಯಂ ಇತ್ಯಾದಿ ಅಭಿವೃದ್ಧಿಗಾಗಿ ಹಾಗೂ ರೂ.೪ ಕೋಟಿಗಳಲ್ಲಿ ೩೧ ಕೊಡವ ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಮಂಜೂರಾತಿ ನೀಡಿ ಕಾಮಗಾರಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಇದೀಗ ೩೧ ಸ್ಥಳಗಳಲ್ಲಿ ಕೊಡವ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗಳಿಗೆ ಒಟ್ಟು ರೂ.೪ ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದ್ದು, ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.