ಕೆಆರ್‌ಎಸ್ ಡ್ಯಾಂ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ

ಬೆAಗಳೂರು, ಜ. ೮: ಕೆಆರ್‌ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೃಷ್ಣರಾಜಸಾಗರ ಅಣೆಕಟ್ಟೆಯ ೨೦ ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿದೆ. ಕೃಷ್ಣರಾಜಸಾಗರ ಡ್ಯಾಮ್ ಈಗಾಗಲೇ ಸಂಕಷ್ಟದಲ್ಲಿದೆ, ಕೆಆರ್‌ಎಸ್ ಡ್ಯಾಂ ಬಳಿ ಹಲವು ಭಾರಿ ದೊಡ್ಡ ಶಬ್ಬಗಳು ಕೇಳಿ ಬಂದಿದೆ. ಅಣೆಕಟ್ಟಿನ ಬಳಿ ಗಣಿಗಾರಿಕೆ ನಡೆಸಿದರೆ ಅಪಾಯವಾಗುವ ಸಂಭವವಿದೆ ಎಂದು ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಕೃಷ್ಣರಾಜಸಾಗರ ಅಣೆಕಟ್ಟನ್ನು ೧೯೨೪ ರಲ್ಲಿ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಿಗೆ ಜೀವ ನೀಡುವ ನದಿಯಾದ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಯಿತು. ಅತ್ಯಂತ ಫಲವತ್ತಾದ ಮೈಸೂರು ಮತ್ತು ಮಂಡ್ಯದಲ್ಲಿ ನೀರಾವರಿಗೆ ಪ್ರಮುಖ ನೀರಿನ ಮೂಲವಾಗಿದೆ. ಕೆಆರ್‌ಎಸ್ ಜಲಾಶಯಕ್ಕೆ ಹಾನಿ ಮಾಡುವುದು ತಡೆಗಟ್ಟಬೇಕಿದೆ. ಇಲ್ಲಿ ಕೆಆರ್‌ಎಸ್ ಸುರಕ್ಷತೆ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರನ್ನು ಒಳಗೊಂಡ ವಿಭಾಗೀಯ ಪೀಠವು, ಸರ್ಕಾರದ ನಿರ್ದೇಶನದಂತೆ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಲಾಗಿದೆ. ಹೀಗಾಗಿ, ಅಲ್ಲಿಯವರೆಗೆ ಗಣಿಗಾರಿಕೆಗೆ ಅನುಮತಿಸುವುದಿಲ್ಲ ಎಂದು ಹೇಳಿತು. ಈ ನಿಷೇಧವು ಅಸ್ತಿತ್ವದಲ್ಲಿರುವ ಗಣಿಗಾರಿಕೆ ಪರವಾನಗಿಗಳ ಮೇಲೂ ಅನ್ವಯಿಸುತ್ತದೆ. ಅಣೆಕಟ್ಟು ಸುರಕ್ಷತಾ ಕಾಯ್ದೆ, ೨೦೨೧ ರ ಅಸ್ತಿತ್ವ ಮತ್ತು ಅದರ ಅಡಿಯಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ನ್ಯಾಯಾಲಯದ ಗಮನಕ್ಕೆ ತರದ ಕಾರಣ ಹಿಂದಿನ ಸುತ್ತಿನ ವ್ಯಾಜ್ಯದಲ್ಲಿ ೨೦ ಕಿ.ಮೀ. ವ್ಯಾಪ್ತಿಯೊಳಗೆ ಗಣಿಗಾರಿಕೆಗೆ ಅನುಮತಿ ನೀಡಲಾಗಿತ್ತು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಯಶ್ ಅಭಿಮಾನಿಗಳು ಸಾವು

ಗದಗ, ಜ. ೮: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನ ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹಣಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸAಸ್ಕಾರವನ್ನು ಸಾಮೂಹಿಕವಾಗಿ ನೆರವೇರಿಸಲಾಯಿತು. ಮೃತ ಯುವಕರ ಕುಟುಂಬದವರು ಬಡವರಾಗಿದ್ದು ಕೂಲಿ ಮಾಡಿಕೊಂಡು ಜೀವನ ನಡೆಸುವವರಾಗಿದ್ದಾರೆ. ಅವರ ಕುಟುಂಬಕ್ಕೆ ತಲಾ ೨ ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ ೫೦ ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಮೃತರ ಮನೆಗೆ ತೆರಳಿದ ಯಶ್ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಶಾಸಕ ನಂಜೇಗೌಡ ನಿವಾಸದ ಮೇಲೆ ದಾಳಿ

ಬೆಂಗಳೂರು, ಜ. ೮: ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ ನಿವಾಸ ಮತ್ತು ಅವರಿಗೆ ಸಂಬAಧಿಸಿದ ಕೆಲವು ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಶಾಸಕರು ಕರ್ನಾಟಕ ವಿಧಾನಸಭೆಯಲ್ಲಿ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಹಾಲು ಒಕ್ಕೂಟ (ಕೋಚಿಮುಲ್) ಅಧ್ಯಕ್ಷರೂ ಆಗಿದ್ದಾರೆ. ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತನಿಖೆಯ ಭಾಗವಾಗಿ ಮಾಲೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಅವರ ನಿವಾಸ ಮತ್ತು ಅವರಿಗೆ ಸಂಬAಧಿಸಿದ ಕೆಲವು ಸ್ಥಳಗಳ ಮೇಲೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೆಲವು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ಆಧಾರದ ಮೇಲೆ ಇ.ಡಿ ಪ್ರಕರಣವನ್ನು ದಾಖಲಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಕೋಚಿಮುಲ್ ನೇಮಕಾತಿ ವಿಚಾರದಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ನೇಮಕಾತಿ ವಿಚಾರದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಆರೋಪಿಸಿದ್ದರು.

ಮಂಗನ ಕಾಯಿಲೆಯಿಂದ ಯುವತಿ ದುರ್ಮರಣ

ಶಿವಮೊಗ್ಗ, ಜ. ೮: ಮಂಗನ ಕಾಯಿಲೆ ಅಥವಾ ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆಎಫ್‌ಡಿ)ನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ೧೯ ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಕೆಎಫ್‌ಡಿ ಪಾಟಿಸಿವ್ ಬಂದಿದ್ದ ಈ ಯುವತಿಯನ್ನು ಉಡುಪಿ ಜಿಲ್ಲೆಯ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಇದು ಈ ವರ್ಷ ಕೆಎಫ್‌ಡಿಯಿಂದ ಸಂಭವಿಸಿದ ಮೊದಲ ಸಾವು. ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್‌ಡಿ ಪರೀಕ್ಷೆ ನಡೆಸಿದಾಗ ಮೊದಲ ಬಾರಿ ನೆಗಟಿವ್ ಬಂದಿತ್ತು. ನಂತರ ಎರಡನೇ ಬಾರಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ.

ವರುಣ್-ಇಶಾ ಒಲಂಪಿಕ್‌ಗೆ ಅರ್ಹತೆ

ಜಕಾರ್ತ, ಜ. ೮: ಭಾರತದ ಯುವ ಶೂಟರ್‌ಗಳಾದ ವರುಣ್ ತೋಮರ್ ಮತ್ತು ಇಶಾ ಸಿಂಗ್ ಅವರು ಸೋಮವಾರ ಜಕಾರ್ತದಲ್ಲಿ ನಡೆದ ಏಷ್ಯನ್ ಕ್ವಾಲಿಫೈಯರ್‌ನ ಪುರುಷರ ಮತ್ತು ಮಹಿಳೆಯರ ೧೦ ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಒಲಂಪಿಕ್‌ಗೆ ಅರ್ಹತೆ ಪಡೆದಿದ್ದಾರೆ. ಇವರಿಬ್ಬರ ಅರ್ಹತೆಯೊಂದಿಗೆ ಪ್ಯಾರಿಸ್‌ಗೆ ಒಲಪಿಂಕ್‌ಗೆ ತೆರಳುವ ಒಟ್ಟು ಭಾರತೀಯ ಶೂಟರ್‌ಗಳ ಸಂಖ್ಯೆ ೧೫ಕ್ಕೆ ಏರಿಕೆಯಾಗಿದೆ. ಇದು ಈ ಹಿಂದೆ ಟೋಕಿಯೊ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಅತ್ಯಧಿಕ ಸಂಖ್ಯೆಗೆ ಸಮನಾಗಿದೆ.

ಬಾಂಗ್ಲಾದೇಶ ಪ್ರಧಾನಿಯಾಗಿ ಶೇಖ್ ಹಸೀನಾ

ನವದೆಹಲಿ, ಜ. ೮: ಪ್ರಮುಖ ವಿರೋಧ ಪಕ್ಷವಾದ ಬಿಎನ್‌ಪಿ ಮತ್ತು ಅದರ ಮಿತ್ರ ಪಕ್ಷಗಳ ಚುನಾವಣಾ ಬಹಿಷ್ಕಾರದ ನಡುವೆಯೂ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅವಾಮಿ ಲೀಗ್ ಪಕ್ಷವು ಅಭೂತಪೂರ್ವ ಬಹುಮತವನ್ನು ಗಳಿಸಿದೆ. ಇದರೊಂದಿಗೆ ಪ್ರಧಾನಿ ಶೇಖ್ ಹಸೀನಾ ಅವರು ಸತತ ನಾಲ್ಕನೇ ಬಾರಿಗೆ ಪ್ರಧಾನಿ ಪಟ್ಟ ಅಲಂಕರಿಸಲಿದ್ದಾರೆ. ಬಾಂಗ್ಲಾದೇಶದ ಪ್ರಧಾನಿಯಾಗಿ ಶೇಖ್ ಹಸೀನಾ ಅವರು ಆಯ್ಕೆಯಾಗಿರುವುದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಸಂಸತ್ ಚುನಾವಣೆಯಲ್ಲಿ ಸತತ ನಾಲ್ಕನೇ ಬಾರಿಗೆ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕಾಗಿ ಶೇಖ್ ಹಸೀನಾ ಅವರನ್ನು ಅಭಿನಂದಿಸಿದ್ದೇನೆ. ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ಅಲ್ಲಿನ ಜನರಿಗೂ ಧನ್ಯವಾದ ಸಲ್ಲಿಸುತ್ತೇನೆ. ಭಾರತ- ಬಾಂಗ್ಲಾದೇಶದ ದ್ವಿಪಕ್ಷೀಯ ಸಂಬAಧವನ್ನು ಇನ್ನಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ' ಎಂದು ಮೋದಿ ಅವರು ‘ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್ ನಿರ್ಧಾರಕ್ಕೆ ಬಿಜೆಪಿ ಸ್ವಾಗತ

ಬೆಂಗಳೂರು, ಜ. ೮: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ತಾ. ೨೨ ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಟಿ ರವಿಯವರು, ಇದು ಉತ್ತಮ ನಿರ್ಧಾರ. ಇದಕ್ಕೆ ಸರ್ಕಾರಕ್ಕೆ ಧನ್ಯವಾದಗಳನ್ನು ಹೇಳುತ್ತೇವೆ. ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಬುದ್ಧಿ ಬಂದಿದೆ. ರಾಮ ಎಲ್ಲರಿಗೂ ಸೇರಿದವನಾಗಿದ್ದಾನೆ. ರಾಮನನ್ನು ತೊರೆದಿದ್ದ ಕಾಂಗ್ರೆಸ್ ಇದೀಗ ರಾಮನ ಬಳಿಗೆ ಬರುತ್ತಿದೆ. ಇದು ಒಳ್ಳೆಯದು. ದೇಶಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ.