ಸಿದ್ದಾಪುರ, ಜ. ೧೩: ಆದಿ ಚುಂಚನಗಿರಿ ವಿದ್ಯಾಸಂಸ್ಥೆಯ ಸಿದ್ದಾಪುರ ಬಿ.ಜಿ.ಎಸ್. ಶಾಲೆಯ ೬ನೇ ವಾರ್ಷಿಕೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆದಿಚುಂಚನಗಿರಿ ವಿದ್ಯಾಸಂಸ್ಥೆಯು ರಾಜ್ಯದ ನಾನಾ ಭಾಗಗಳಲ್ಲಿ ಶಿಕ್ಷಣ ಕ್ರಾಂತಿಯನ್ನು ಮೂಡಿಸಿ ಕಾರ್ಯನಿರ್ವಹಿಸುತ್ತಿದ್ದು ಜಾತಿ-ಮತ ಭೇದವಿಲ್ಲದೆ ಇಲ್ಲಿನ ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಸಿಕೊಂಡು ಉನ್ನತ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಂಡಿದ್ದಾರೆ.

ಎಲ್ಲಾ ಮಕ್ಕಳನ್ನು ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲು ಪೂಜ್ಯರ ಚಿಂತನೆಯಿAದ ಇದೀಗ ವಿವಿಧ ಸಂಸ್ಥೆಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಶಿಕ್ಷಣ ಕಲಿಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಆದಿ ಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರು ಮಾತನಾಡಿ, ಪ್ರತಿಯೊಬ್ಬರೂ ಶಿಕ್ಷಣ ಪಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾದ್ಯವಾಗಲಿದ್ದು ಮಕ್ಕಳು ಶಿಕ್ಷಣದ ಮೂಲಕ ಮುಂದೆ ಬರಬೇಕು ಎಂದರು. ಶಿಕ್ಷಣದಿಂದ ವಂಚಿತರಾಗದೆ ಕಲಿಕೆಯ ಮೂಲಕ ತಮ್ಮ ಭವಿಷ್ಯ ರೂಪಿಸಿಕೊಂಡು ಉತ್ತಮ ಪ್ರಜೆಗಳಾಗಿ ಮುಂದೆ ಬರಬೇಕೆಂದರು.

ಕೊಡಗು ವಿಶ್ವ ವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ. ಸಿನಪ್ಪ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಭಾಗದಲ್ಲಿದ್ದು ಪದವಿ ಶಿಕ್ಷಣಕ್ಕೆ ಜಿಲ್ಲೆಯ ನಾನಾ ಭಾಗಗಳಿಗೆ ತೆರಳಬೇಕಾಗಿದೆ. ಬಿ.ಜಿ.ಎಸ್. ಶಿಕ್ಷಣ ಸಂಸ್ಥೆಯಲ್ಲಿ ಪ್ರಸಕ್ತ ವರ್ಷದಿಂದಲೆ ಪದವಿ ಶಿಕ್ಷಣಕ್ಕೆ ಚಾಲನೆ ನೀಡುವುದಾಗಿ ಹೇಳಿದ ಅವರು ಈ ವರ್ಷ ಬಿ.ಎ. ಮತ್ತು ಬಿ.ಕಾಂ. ಮೊದಲ ವರ್ಷದ ಕೋರ್ಸ್ ಪ್ರಾರಂಭಗೊಳ್ಳುತ್ತಿದ್ದು ಹಂತ ಹಂತವಾಗಿ ಮುಂದಿನ ತರಗತಿಗಳು ಪ್ರಾರಂಭಗೊಳ್ಳಲಿದೆ ಎಂದರು. ಮಕ್ಕಳು ಪದವಿ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.

ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ಪ್ರೇಮ ಗೋಪಾಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನ ಸೆಳೆದವು.