ಮಡಿಕೇರಿ, ಜ. ೧೬: ಎರಡು ವಾರದೊಳಗೆ ಕೊಡಗು ಜಿಲ್ಲೆಯ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ, ಗಡಿ ಹಾಗೂ ಮೀಸಲಾತಿ ಪ್ರಕಟಗೊಳ್ಳಲಿವೆ. ಕೊಡಗು ಜಿಲ್ಲೆ ಹೊರತುಪಡಿಸಿ ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಮಾರ್ಚ್ ಅಂತ್ಯದೊಳಗೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರು ಗೆಲ್ಲುವ ಕ್ಷೇತ್ರದತ್ತ ಮುಖಮಾಡಿದ್ದಾರೆ. ಜಿಲ್ಲೆಯಲ್ಲಿ ಕಳೆದ ಎರಡು ದಶಕಗಳ ಬಳಿಕ ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಿದ್ದಾರೆ. ರಾಜ್ಯದಲ್ಲಿ ಕೂಡ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿರುವುದರಿಂದ, ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಒಲವು ತೋರಿದ್ದಾರೆ.

ಅಲ್ಪಸಂಖ್ಯಾತರು ಹೆಚ್ಚಿರುವ ಕ್ಷೇತ್ರಗಳ ಮೇಲೆ ಕಣ್ಣು!

ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಿದ್ದಾರೆ ಎಂದು ಪೂರ್ಣ ಪ್ರಮಾಣದಲ್ಲಿ ಕೊಡಗು ಕಾಂಗ್ರೆಸ್‌ಮಯವಾಗಿಲ್ಲ. ಕಾಂಗ್ರೆಸ್ ಪಕ್ಷಕ್ಕಿಂತ ಭಾರತೀಯ ಜನತಾ ಪಾರ್ಟಿ ಬೂತ್ ಮಟ್ಟದಲ್ಲಿ ಬಲಿಷ್ಠವಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ಇರುವುದರಿಂದ ಚುನಾವಣಾ ವೆಚ್ಚ ಹಾಗೂ ಪ್ರಚಾರದಲ್ಲಿ ಸಹಾಯವಾಗಬಹುದೆಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳು ಇದ್ದಾರೆ.

ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸಹಿತ ಜಿಲ್ಲಾ ಕಾಂಗ್ರೆಸ್ ಮುಖಂಡರು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಒಲವು ತೋರಿದ್ದಾರೆ. ಅದರಲ್ಲೂ ಗೆಲ್ಲುವ ಸುರಕ್ಷಿತ ಕ್ಷೇತ್ರಗಳ ಹುಡುಕಾಟದಲ್ಲಿ ಕಾಂಗ್ರೆಸ್ ಮುಖಂಡರು ಇದ್ದಾರೆ. ಕಾಂಗ್ರೆಸ್ ಸಾಂಪ್ರದಾಯಿಕ ಮತದಾರರಾದ ಅಲ್ಪಸಂಖ್ಯಾತ ಮುಸ್ಲಿಂ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಸುಲಭ ಗೆಲುವಿನ ವಿಶ್ವಾಸದಲ್ಲಿದ್ದಾರೆ, ಕೊಡಗು ಜಿಲ್ಲಾ ಕಾಂಗ್ರೆಸಿನ ಕೆಲವು ಮುಖಂಡರುಗಳು. ರಾಜ್ಯದಲ್ಲಿ ಮೊದಲ ಅವಧಿಗೆ ನಿಗಮಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕೈ ತಪ್ಪುವುದು ಖಚಿತ ಎಂಬ ಮಾಹಿತಿ ದೊರೆತ ಜಿಲ್ಲೆಯ ಆಕಾಂಕ್ಷಿಗಳು ಕೂಡ, ಜಿಲ್ಲಾ ಪಂಚಾಯಿತಿ ಚುನಾವಣೆಯತ್ತ ಆಸಕ್ತಿ ತೋರಿದ್ದಾರೆ.

ಅಲ್ಪಸಂಖ್ಯಾತ ಮುಖಂಡರಿಗೆ ಕೈ ತಪ್ಪುತ್ತಾ ಗೆಲ್ಲುವ ಕ್ಷೇತ್ರಗಳು!

ಅಲ್ಪಸಂಖ್ಯಾತ ಮುಸ್ಲಿಂ ಮತದಾರರು ಹೆಚ್ಚಿರುವ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕೊಡವ ಹಾಗೂ ಗೌಡ ಜನಾಂಗದ ಕಾಂಗ್ರೆಸ್ ಮುಖಂಡರು ಸ್ಪರ್ಧೆಗೆ ಒಲವು ತೋರಿರುವುದರಿಂದ ಜಿಲ್ಲೆಯ ಅಲ್ಪಸಂಖ್ಯಾತ ಮುಖಂಡರಿಗೆ ಟಿಕೆಟ್ ಜಾರುವ ಆತಂಕವುAಟಾಗಿದೆ. ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುವುದರಿಂದ ಶಾಸಕರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವವರು ತಾವು ಸ್ಪರ್ಧಿಸುವ ಕ್ಷೇತ್ರದಲ್ಲಿ ತಮಗೆ ಅನುಕೂಲವಾಗುವ ಮೀಸಲಾತಿಯನ್ನು ಪ್ರಕಟಿಸುವ ಲೆಕ್ಕಾಚಾರದಲ್ಲಿದ್ದಾರೆ.

ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧೆ ಬಯಸಿರುವ ಜಿಲ್ಲಾ ಕಾಂಗ್ರೆಸ್ ಘಟಾನುಘಟಿಗಳು ಶಾಸಕರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ಕುಶಾಲನಗರ ತಾಲೂಕಿನಲ್ಲಿ ಅತೀ ಹೆಚ್ಚು ಅಲ್ಪಸಂಖ್ಯಾತ ಮುಸ್ಲಿಂ ಮತದಾರರಿರುವ ವಾಲ್ನೂರು-ತ್ಯಾಗತ್ತೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮೇಲೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಕಣ್ಣಿಟ್ಟಿದ್ದಾರೆ.

ವೀರಾಜಪೇಟೆ ಕ್ಷೇತ್ರದ ಸಿದ್ದಾಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಕಸರತ್ತು ನಡೆಸುತ್ತಿದ್ದಾರೆ. ಮತ್ತೊಮ್ಮೆ ಸುಂಟಿಕೊಪ್ಪ ಕ್ಷೇತ್ರದಲ್ಲಿ ಸ್ಪರ್ಧಿಸಲು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ ಸಿದ್ಧತೆ ನಡೆಸಿದ್ದಾರೆ.

ವೀರಾಜಪೇಟೆ ಕ್ಷೇತ್ರದ ಚೆನ್ನಯ್ಯನಕೋಟೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಜಿಲ್ಲಾ ಕಾಂಗ್ರೆಸ್ ಒಬಿಸಿ ಅಧ್ಯಕ್ಷ ಬಾನಂಡ ಪೃಥ್ಯು ಹಾಗೂ ಕೆಪಿಸಿಸಿ ಸದಸ್ಯೆ ಸರಿತಾ ಪೂಣಚ್ಚ ಆಕಾಂಕ್ಷಿಗಳಾಗಿದ್ದಾರೆ. ಅತೀ ಹೆಚ್ಚು ಮುಸ್ಲಿಂ ಮತದಾರರಿರುವ ವೀರಾಜಪೇಟೆ ಕ್ಷೇತ್ರದ ನಾಪೋಕ್ಲು ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಮುಖರು ಅಲ್ಪಸಂಖ್ಯಾತ ಮುಖಂಡರು ಸ್ಪರ್ಧಿಸಿದರೆ, ಯಾವುದೇ ಬಂಡಾಯವಿಲ್ಲದಿದ್ದರೆ ಗೆಲ್ಲಬಹುದಾದ ೪ ರಿಂದ ೬ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಜಿಲ್ಲಾ ಕಾಂಗ್ರೆಸ್ ಮುಸ್ಲಿಂ ಮುಖಂಡರ ಕೈ ತಪ್ಪುವ ಸಾಧ್ಯತೆಗಳಿವೆ.

ಮುಸ್ಲಿಂ ಮುಖಂಡರಿAದ ೬ ಕ್ಷೇತ್ರಗಳಿಗೆ ಬೇಡಿಕೆ!

ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಲು ಮುಸ್ಲಿಂ ಮತದಾರರು ಪ್ರಮುಖ ಪಾತ್ರವಹಿಸಿದ್ದಾರೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿಗೆ ಓಡಾಡಿದ ಜಿಲ್ಲೆಯ ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರು ಸುಸ್ತಾಗಿದ್ದಾರೆ. ಕೊಡಗಿನ ಅಲ್ಪಸಂಖ್ಯಾತ ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವುದು ತೀರ ವಿರಳ.

ಇದೀಗ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಮತದಾರರು ಹೆಚ್ಚಿರುವ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಸ್ಪರ್ಧಿಸಲು ಅವಕಾಶ ನೀಡಬೇಕೆಂಬ ಬೇಡಿಕೆ ಮುಂದಿಡಲು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರುಗಳು ತೀರ್ಮಾನಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿರುವುದರಿಂದ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದಿಂದ ಅಲ್ಪಸಂಖ್ಯಾತರು ಸ್ಪರ್ಧಿಸುವುದು ಅನುಮಾನ. ಕನಿಷ್ಟ ೬ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಮುಸ್ಲಿಂ ಮುಖಂಡರಿಗೆ ಸ್ಪರ್ಧಿಸಲು ಅವಕಾಶ ನೀಡಬೇಕೆಂಬ ಬೇಡಿಕೆ ಶಾಸಕದ್ವಯರಿಗೆ ಸಲ್ಲಿಸಲು ಜಿಲ್ಲಾ ಕಾಂಗ್ರೆಸ್ ಮುಸ್ಲಿಂ ಮುಖಂಡರು ತೀರ್ಮಾನಿಸಿದ್ದಾರೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ವಾಲ್ನೂರು-ತ್ಯಾಗತ್ತೂರು, ಸಿದ್ದಾಪುರ, ನಾಪೋಕ್ಲು, ಚೆನ್ನಯ್ಯನಕೋಟೆ, ಕೊಡ್ಲಿಪೇಟೆ, ಸುಂಟಿಕೊಪ್ಪ ಕ್ಷೇತ್ರದಲ್ಲಿ ಮುಸ್ಲಿಂ ಮುಖಂಡರು ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಗಳ ದಂಡೇ ಇದೆ. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಟ್ಟಮುಡಿ ಹಂಸ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎಂ. ಲತೀಫ್, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅಬ್ದುಲ್ ರಹಮಾನ್ ನಾಪೋಕ್ಲು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಎ. ಹನೀಫ್, ಹಾಲುಗುಂದ ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ರಹಮಾನ್ (ಅಂದಾಯಿ), ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಕೀಂ, ಹಾಲಿ ಗ್ರಾಮ ಪಂಚಾಯಿತಿ ಸದಸ್ಯೆ ಸುಹದಾ ಅಶ್ರಫ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವಕ್ತಾರ ಕೆ.ಎ. ಅಬ್ದುಲ್ ರಜಾಕ್ ಬಜೆಗುಂಡಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಕಾAಗ್ರೆಸ್ ಹೈಕಮಾಂಡ್ ಹಾಗೂ ಶಾಸಕದ್ವಯರು ಕೊಡಗಿನಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಎಷ್ಟು ಸ್ಥಾನಗಳಲ್ಲಿ ಅಲ್ಪಸಂಖ್ಯಾತ ಮುಸ್ಲಿಮರಿಗೆ ಸ್ಪರ್ಧಿಸಲು ಟಿಕೆಟ್ ನೀಡಬಹುದೆಂದು ಎನ್ನುವ ಕುತೂಹಲ ಮನೆಮಾಡಿದೆ.

-ಕೆ.ಎಂ. ಇಸ್ಮಾಯಿಲ್ ಕಂಡಕರೆ