ಗೋಣಿಕೊಪ್ಪಲು, ಜ. ೧೬: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಾವೇರಿ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕೇರಳ ರಾಜ್ಯದ ಕೊಚ್ಚಿಯ ಖಾಸಗಿ ಕಂಪೆನಿಯೊAದರ ಉದ್ಯೋಗಿ ವಿಬಿಶ್ ವಿಜಯನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ಶಿಕ್ಷಣ ಪಡೆದು ಪದವೀಧರ ಆಗುವುದರೊಂದಿಗೆ, ಪೋಷಕರಿಗೆ ಗೌರವ ತರುವ ರೀತಿಯಲ್ಲಿ ನಡೆದುಕೊಳ್ಳಬೇಕು. ಶಿಕ್ಷಣದ ಜೊತೆಗೆ ಸಮಾಜದ ಹಾಗೂ ತಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಚಿಂತನೆ ನಡೆಸುವಂತಾಗಬೇಕು ಎಂದರು. ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಮಾದರಿ ವ್ಯಕ್ತಿಯಾಗಿ ರೂಪುಗೊಳ್ಳುವಂತೆ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಮಾತನಾಡಿ, ಅಂದಿನ ಶಿಕ್ಷಣ ಪ್ರೇಮಿಗಳು ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣಕೊಡಿಸುವ ಉದ್ದೇಶದಿಂದ ಈ ಕಾಲೇಜನ್ನು ಸ್ಥಾಪನೆ ಮಾಡಿದ್ದಾರೆ. ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆದಾಗ ಅವರ ಶ್ರಮ ಸಾರ್ಥಕವಾಗುತ್ತದೆ. ಯಾವುದೇ ವಿದ್ಯಾರ್ಥಿ ನಾಗರಿಕ ಹಾಗೂ ಮನರಂಜನೆಯ ಹೆಸರಿನಲ್ಲಿ ತಪ್ಪು ದಾರಿ ಹಿಡಿಯಬಾರದು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬಂದವು. ಉಪನ್ಯಾಸಕಿ ಕೆ.ಬಿ. ಸರಸ್ವತಿ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಪಿ.ಸಿ. ಮೀನಾಕ್ಷಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲೆ ಎಂ.ಕೆ. ಪದ್ಮ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಬಿ. ಪೂವಮ್ಮ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ಎನ್.ಆರ್. ರಾಕೇಶ್, ಎಂ. ಗ್ರೀಷ್ಮ ಉತ್ತಪ್ಪ, ಥಾಮಸ್ ಆಂಟೋನಿ, ಬಿ.ವಿ. ರಚನ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.