ಸೋಮವಾರಪೇಟೆ, ಜ. ೧೭: ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ‘ಸಾಂದೀಪನಿ ಉತ್ಸವ’ ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಶಾಸಕ ಡಾ. ಮಂಥರ್ ಗೌಡ ಮಾತನಾಡಿ, ಶಾಲಾ ವಾರ್ಷಿಕೋತ್ಸವ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ವರ್ಷವಿಡೀ ಕೇವಲ ಪಠ್ಯದಲ್ಲಿ ಮಾತ್ರ ತಮ್ಮನ್ನು ತೊಡಗಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಒಂದೆರಡು ದಿನಗಳ ಮಟ್ಟಿಗೆ ಇತರ ಚಟುವಟಿಕೆಗಳಲ್ಲಿ ತೊಡಗಲು ಅಗತ್ಯ. ಶಿಕ್ಷಣದ ಸಮಯದಲ್ಲಿ ಪೋಷಕರು ತಮ್ಮ ಮಕ್ಕಳ ಮೇಲೆ ಯಾವುದೇ ರೀತಿಯ ಒತ್ತಡ ಹಾಕಬಾರದು. ಬೇರೆ ಮಕ್ಕಳೊಂದಿಗೆ ಮಕ್ಕಳನ್ನು ಹೋಲಿಕೆ ಮಾಡಿ ಹೀಯಾಳಿಸಬಾರದು ಎಂದರು. ಸಿಆರ್‌ಪಿ ಪ್ರೇಮ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಕೇವಲ ಪಠ್ಯದಲ್ಲಿ ತೊಡಗಿಸಿಕೊಳ್ಳಲು ಮಾತ್ರ ಅವಕಾಶ ಮಾಡಿಕೊಡಬಾರದು. ಓದಿನಷ್ಟೇ ಇತರೆ ಚಟುವಟಿಕೆಗಳು ನಮ್ಮ ಜೀವನದಲ್ಲಿ ಪ್ರಮುಖವಾಗಿದ್ದು, ಅದರಲ್ಲಿ ಪಾಲ್ಗೊಳ್ಳುವಂತೆ ಮಕ್ಕಳನ್ನು ಪ್ರೇರೇಪಿಸಬೇಕು. ವಾರ್ಷಿಕೋತ್ಸವದ ವೇದಿಕೆಯನ್ನು ಬಳಸಿಕೊಂಡು ಅದರಲ್ಲಿನ ಎಲ್ಲ ಸ್ಪರ್ಧೆಗಳು ಹಾಗೂ ಚಟಿವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಂ.ಟಿ. ದಾಮೋದರ್ ವಹಿಸಿದ್ದರು. ವೇದಿಕೆಯಲ್ಲಿ ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿ.ಎಸ್. ಗೀತ, ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಗುಂಡೇಗೌಡ, ಶಾಲಾ ಮುಖ್ಯ ಶಿಕ್ಷಕ ಎಚ್.ಎಸ್. ರಜಿತ್ ಗಾಂಧಿ ಉಪಸ್ಥಿತರಿದ್ದರು. ಈ ಸಂದರ್ಭ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳು, ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಕ್ರೀಡಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕೊನೆಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.