ಪೊನ್ನಂಪೇಟೆ, ಜ. ೧೮: ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದ್ದು, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಮುಂದೆ ಪಟ್ಟಣ ಪಂಚಾಯಿತಿ ಆಗಿ ರೂಪುಗೊಳ್ಳಲಿದೆ.

ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೆಗೆ ಏರಿಸುವಂತೆ ಕೊಡಗು ಜಿಲ್ಲಾಧಿಕಾರಿ ಪ್ರಸ್ತಾವನೆ ಸಲ್ಲಿಸಿದ್ದರು. ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದು ಸಚಿವರು ಗಳಾದ ಹೆಚ್.ಸಿ. ಮಹಾದೇವಪ್ಪ ಹಾಗೂ ಎಚ್.ಕೆ. ಪಾಟೀಲ್ ಈ ಬಗ್ಗೆ ತಿಳಿಸಿದರು. ಪೊನ್ನಂಪೇಟೆ ಜೊತೆಗೆ, ಬಲ್ಯಮಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಾಗಶಃ ಮುಗುಟಗೇರಿ ಗ್ರಾಮ ಒಳಗೊಂಡ ಪ್ರದೇಶವನ್ನು `ಪರಿವರ್ತಿತ ಪ್ರದೇಶ'ವನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.

(ಮೊದಲ ಪುಟದಿಂದ) ಪೊನ್ನಂಪೇಟೆ ತಾಲೂಕು ರಚನೆಗೊಂಡ ನಂತರ ತಾಲೂಕು ಕೇಂದ್ರವನ್ನು ಪಟ್ಟಣ ಪಂಚಾಯಿತಿಯಾಗಿ ಪರಿವರ್ತಿಸುವ ಬಗ್ಗೆ ಚಿಂತನೆ ನಡೆಸಲಾಗಿತ್ತು.

ಪೊನ್ನಂಪೇಟೆ ತಾಲೂಕು ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೊನ್ನಂಪೇಟೆ ನಾಗರಿಕ ವೇದಿಕೆಯು ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಪರಿವರ್ತನೆಗೊಳ್ಳಲು ಬೇಕಾದ ಎಲ್ಲಾ ಕಡತಗಳನ್ನು ಜಿಲ್ಲಾಧಿಕಾರಿಗಳಿಗೆ ಒದಗಿಸಿದ್ದರು.

ಈ ನಿಟ್ಟಿನಲ್ಲಿ ಪಟ್ಟಣ ಪಂಚಾಯಿತಿ ಬೇಡಿಕೆಯನ್ನು ಹಿಂದಿನ ಶಾಸಕ ಕೆ.ಜಿ. ಬೋಪಯ್ಯ ಅವರ ನೇತೃತ್ವದಲ್ಲಿ ಸರ್ಕಾರದ ಮುಂದಿಡಲಾಗಿತ್ತು. ಆದರೆ ನಗರ ಸ್ಥಳೀಯ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸುವ ಕುರಿತಂತೆ ಸರ್ಕಾರದ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ದಿನಾಂಕ ೧೩.೦೯.೨೦೨೩ ರಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ತಿರಸ್ಕರಿಸಿ, ಪುರಸಭೆಯಾಗಿ ಮಾರ್ಪಡಿಸಲು ಚಿಂತಿಸಲಾಗಿತ್ತು. ಹಾಗೂ ಮತ್ತೊಮ್ಮೆ ಸಮಗ್ರವಾಗಿ ಪರಿಶೀಲಿಸಿ, ಮಾಹಿತಿಯನ್ನು ಸಲ್ಲಿಸುವಂತೆ ಪಂಚಾಯಿತಿಗೆ ಪತ್ರ ಮುಖೇನ ಸೂಚಿಸಲಾಗಿತ್ತು. ಪಟ್ಟಣ ಪಂಚಾಯಿತಿಯಾಗಿ ಪರಿವರ್ತಿಸುವಂತೆ ಸಲ್ಲಿಸಲಾಗಿರುವ ಪ್ರಸ್ತಾವನೆಯನ್ನು ತಿರಸ್ಕರಿಸಲು ಯಾವುದೇ ರೀತಿಯ ಕಾರಣವನ್ನು ಪತ್ರದಲ್ಲಿ ನಮೂದಿಸಿರಲಿಲ್ಲ.

ಇದೀಗ ಶಾಸಕ ಪೊನ್ನಣ್ಣನವರ ಶಿಫಾರಸ್ಸಿನ ಮೇರೆಗೆ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮಾರ್ಪಡಿಸಲು ಅನುಮೋದನೆ ದೊರಕಿದೆ. -

- ವರದಿ : ಚನ್ನನಾಯಕ