ಮಡಿಕೇರಿ, ಜ. ೨೨: ಗ್ರಾಮ ಪಂಚಾಯ್ತಿ ನೌಕರರಿಗೆ ಕನಿಷ್ಟ ವೇತನ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾ. ೨೪ ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾ.ಪಂ. ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಆರ್. ಭರತ್ ತಿಳಿಸಿದ್ದಾರೆ.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಸೇರಿದಂತೆ ಶಾಸಕರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ೩೧ ಸಾವಿರ ರೂ.ಗಳನ್ನು ಕನಿಷ್ಟ ವೇತನವಾಗಿ ನಿಗದಿಪಡಿಸಬೇಕೆನ್ನುವುದು ತಮ್ಮ ಪ್ರಮುಖ ಬೇಡಿಕೆಯಾಗಿದೆ. ಇದರೊಂದಿಗೆ ನಿವೃತ್ತ ಪಂಚಾಯಿತಿ ನೌಕರರ ಬದುಕಿಗೆ ಆರ್ಥಿಕ ಸ್ಥಿರತೆ ನೀಡಲು ೬ ಸಾವಿರ ರೂ. ಪಿಂಚಣಿ ನೀಡಬೇಕು. ಅನಾರೋಗ್ಯಕ್ಕೆ ಒಳಗಾದ ನೌಕರರಿಗೆ ಆಸ್ಪತ್ರೆ ವೆಚ್ಚವನ್ನು ಭರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪಂಚಾಯ್ತಿಗಳಿಗೆ ನೌಕರರನ್ನು ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವ ಪದ್ಧತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

೨೦೨೩ರ ನ.೧೮ ರಂದು ಸರ್ಕಾರ ಆದೇಶವೊಂದನ್ನು ಹೊರಡಿಸಿ, ೧೧,೧೭೦ ಪಂಚಾಯಿತಿ ನೌಕರರನ್ನು ಅನುಮೋದನೆಗೊಳಿಸಬೇಕೆಂದು ತಿಳಿಸಿತ್ತು. ಆದರೆ ಕೊಡಗು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಈ ಆದೇಶ ಕಾರ್ಯರೂಪಕ್ಕೆ ಬಂದಿಲ್ಲ. ತಕ್ಷಣ ಈ ಆದೇಶವನ್ನು ಜಾರಿ ಮಾಡಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಖಜಾಂಚಿ ಎಂ.ಕೆ. ವಸಂತ, ಜಿಲ್ಲಾ ಸಮಿತಿ ಸದಸ್ಯರಾದ ಪಿ. ರಂಗಸ್ವಾಮಿ ಹಾಗೂ ಹೆಚ್.ಎಂ. ದಿನೇಶ್ ಉಪಸ್ಥಿತರಿದ್ದರು.