ಮಡಿಕೇರಿ, ಫೆ. ೬: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕಥಾ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಕನ್ನಡ ನಾಡು, ನುಡಿ, ಸಾಹಿತ್ಯದ ಪರಿಚಯ ಮಾಡಿಕೊಡುತ್ತಿರುವುದು ಸ್ವಾಗತಾರ್ಹ ಎಂದು ಸಂತ ಜೋಸೆಫರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ರೋಜಾ ನುಡಿದರು.
ಮಡಿಕೇರಿಯ ಸಂತ ಜೋಸೆಫರ ಪದವಿಪೂರ್ವ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಾ. ಡಿಸೋಜ ದತ್ತಿ ಕಾರ್ಯಕ್ರಮದಂತೆ ಏರ್ಪಡಿಸಿದ್ದ ಪದವಿಪೂರ್ವ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ರೀತಿಯ ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳಿಗೆ ಪಠ್ಯೇತರ ಸಾಹಿತ್ಯಿಕ ವಿಚಾರಗಳನ್ನು ತಿಳಿದುಕೊಳ್ಳಲು ಅವಕಾಶವಾಗುತ್ತದೆ. ಜೊತೆಗೆ ನಮ್ಮ ನಾಡಿನ ಸಾಹಿತ್ಯ-ಸಂಸ್ಕೃತಿ ಪರಂಪರೆ ಅಧ್ಯಯನ ಮಾಡಲು ಅವಕಾಶವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು, ದತ್ತಿನಿಧಿ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಆಚರಿಸುತ್ತಿದ್ದು ಕನ್ನಡದ ನುಡಿಯ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡುತ್ತಿದೆ. ಜೊತೆಗೆ ಸ್ಪರ್ಧೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕ ಸ್ಪರ್ಧಾ ಮನೋಭಾವ ಬೆಳೆಯಲು ಅವಕಾಶ ಮಾಡಿಕೊಡುತ್ತಿದೆ ಎಂದರು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ. ಮುನಿರ್ ಅಹಮದ್, ರೇವತಿ ರಮೇಶ್ ಮತ್ತು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಚೊಕ್ಕಾಡಿ ಪ್ರೇಮ ರಾಘವಯ್ಯ ಉಪಸ್ಥಿತರಿದ್ದರು. ಜಿಲ್ಲೆಯ ನಲವತ್ತಕ್ಕೂ ಹೆಚ್ಚು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ವಿವಿಧ ಕಾಲೇಜುಗಳ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.