ಮಡಿಕೇರಿ, ಫೆ. ೨೧: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೊಡಗು ಜಿಲ್ಲಾ ಘಟಕ ಹಾಗೂ ಸೋಮವಾರಪೇಟೆ ತಾಲೂಕು ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ತಾ. ೨೪ ಮತ್ತು ೨೫ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ನಗರದ ಪತ್ರಿಕಾ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪೊನ್ನಚನ ಶ್ರೀನಿವಾಸ್ ಈ ಬಗ್ಗೆ ಮಾಹಿತಿ ನೀಡಿದರು. ಕೂಡಿಗೆಯ ಕ್ರೀಡಾ ಶಾಲಾ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ.’
ಫುಟ್ಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಕ್ರಿಕೆಟ್, ಯೋಗ, ಖೋಖೋ, ಈಜು ಸೇರಿದಂತೆ ಹಲವಾರು ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು, ಜಾನಪದ ಗೀತೆ, ಜಾನಪದ ನೃತ್ಯ, ಕಿರುನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ ೯೪೮೦೦೩೨೭೧೨ ದೂರವಾಣಿಯನ್ನು ಸಂಪರ್ಕಿಸ ಬಹುದು ಎಂದು ಶ್ರೀನಿವಾಸ್ ತಿಳಿಸಿದರು.
ತಾ. ೨೪ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಕ್ರೀಡಾಕೂಟವನ್ನು ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂಥರ್‌ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಬೋಜೇಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿಯಿತ್ತರು.
ತಾ. ೨೭ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ನಡೆಯಲಿದ್ದು, ಕೊಡಗಿನಿಂದ ಸರ್ಕಾರಿ ನೌಕರರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಶ್ರೀನಿವಾಸ್ ಹೇಳಿದರು.
ಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಸಿ. ಅರುಣ್‌ಕುಮಾರ್, ಖಜಾಂಚಿ ಪಿ.ಡಿ. ರಾಜೇಶ್, ರಾಜ್ಯ ಪರಿಷತ್ ಸದಸ್ಯ ವಿ.ಎಸ್. ಸುಗುಣಾನಂದ, ಗೌರವಾಧ್ಯಕ್ಷ ಎಸ್.ಟಿ. ಶಮ್ಮಿ, ಹಿರಿಯ ಉಪಾಧ್ಯಕ್ಷ ಪಿ.ಎಂ. ಬಾಬು ಉಪಸ್ಥಿತರಿದ್ದರು.