ಸೋಮವಾರಪೇಟೆ, ಫೆ. ೨೧: ಭಾರತದ ಆತ್ಮದಂತಿರುವ ಸಂವಿಧಾನದ ಆಶಯಗಳನ್ನು ಪ್ರತಿಯೋರ್ವರೂ ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಚಿಕ್ಕಅಳುವಾರ ಕೊಡಗು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಮೀರ್ ಅಹಮ್ಮದ್ ಕರೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ ವತಿಯಿಂದ ಇಲ್ಲಿನ ಜೇಸಿ ವೇದಿಕೆಯಲ್ಲಿ ನಡೆದ ತಾಲೂಕು ಮಟ್ಟದ ಸಂವಿಧಾನ ಜಾಗೃತಿ ಜಾಥಾ-ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ಪ್ರಪಂಚದಲ್ಲಿಯೇ ಶ್ರೇಷ್ಠ ಸಂವಿಧಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದ ಸಂವಿಧಾನದ ಪೀಠಿಕೆ ಮತ್ತು ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಕಡ್ಡಾಯವಾಗಿ ತಿಳಿದುಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಜೀವನ ಸಾಗಿಸಬೇಕೆಂದು ತಿಳಿಸಿದರು.
ಸಂವಿಧಾನ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ರಕ್ಷಿತಾ, ರೇಶ್ಮಾ (ದ್ವಿತೀಯ), ಸಮೀಕ್ಷಾ (ತೃತೀಯ), ಪ್ರೌಢಶಾಲಾ ವಿಭಾಗದಲ್ಲಿ ಮೌನ (ಪ್ರ), ಸಿರಿ (ದ್ವಿ) ಸೂರ್ಯ (ತೃ) ಅವರುಗಳಿಗೆ ಬಹುಮಾನ ವಿತರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ ಸಂವಿಧಾನದ ಪೀಠಿಕೆ ಬೋಧಿಸಿದರು. ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು.
ವೇದಿಕೆಯಲ್ಲಿ ತಹಶೀಲ್ದಾರ್ ನವೀನ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಬಿ.ಇ.ಓ. ಭಾಗ್ಯಮ್ಮ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಶಿಶು ಅಭಿವೃದ್ಧಿ ಇಲಾಖೆಯ ಸಿ.ಡಿ.ಪಿ.ಓ. ವಿಮಲ, ಪ್ರಮುಖರಾದ ಹೆಚ್.ಬಿ. ಜಯಮ್ಮ, ಹೆಚ್.ಎ. ನಾಗರಾಜ್. ಟಿ.ಈ. ಸುರೇಶ್, ಎಸ್.ಡಿ. ವಿಜೇತ, ಜಯಪ್ಪ ಹಾನಗಲ್, ಬಿ.ಇ. ಜಯೇಂದ್ರ, ಪ.ಪಂ. ಸದಸ್ಯರಾದ ಜಯಂತಿ ಶಿವಕುಮಾರ್, ಶೀಲಾ ಡಿಸೋಜ, ಪಿ.ಕೆ. ಚಂದ್ರು, ಬಿ.ಆರ್. ಮಹೇಶ್, ಮೋಹಿನಿ, ಶುಭಕರ್ ಮತ್ತಿತರರು ಇದ್ದರು.
ಇದಕ್ಕೂ ಮುನ್ನ ಕಕ್ಕೆಹೊಳೆ ಜಂಕ್ಷನ್ನಿAದ ಜಾಗೃತಿ ಜಾಥಾದ ಸ್ತಬ್ಧಚಿತ್ರದ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳ ಬ್ಯಾಂಡ್, ನಗಾರಿ, ಆಟೋ ರ್ಯಾಲಿಯೊಂದಿಗೆ ತೆರಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಜೇಸಿ ವೇದಿಕೆ ಮುಂಭಾಗ ಇ. ರಾಜು ತಂಡದವರಿAದ ನಾಟಕ, ಗಾಯನ ಗಮನ ಸೆಳೆಯಿತು.